ನವದೆಹಲಿ:ಉತ್ತರಪ್ರದೇಶದ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಕಾಂಗ್ರೆಸ್ ಆಡಳಿತದ ರಾಜಸ್ಥಾನದ ಆಸ್ಪತ್ರೆಯಲ್ಲಿ ಬಾಲಕಿಯ ಬೆತ್ತಲೆ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿರುವ ಸುದ್ದಿಯೊಂದು ಹರಿದಾಡುತ್ತಿದೆ ಎಂದು ವರದಿ ತಿಳಿಸಿದೆ.
ರಾಜಸ್ಥಾನದ ಬನ್ಸ್ ವಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ. ಬುಡಕಟ್ಟು ಜನ ಬಾಹುಳ್ಯದ ಖಾಮೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಿದೆ.
ಪೊಲೀಸರು ಭಾರತೀಯ ದಂಡ ಸಂಹಿತೆ 302(ಕೊಲೆ), 366 (ಕಿಡ್ನಾಪ್) ಮತ್ತು 372 ( ವೇಶ್ಯಾವಾಟಿಕೆಗೆ ಅಪ್ರಾಪ್ತ ಬಾಲಕಿ ಮಾರಾಟ) ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಿಲ್ಲ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಆರೋಪಿ ಸಂತ್ರಸ್ತೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಓಡಿ ಹೋಗಿರುವುದಾಗಿ ಟೈಮ್ಸ್ ನೌ ವರದಿ ವಿವರಿಸಿದೆ. ಆಕೆಗೆ ವಿಷ ಕುಡಿಸಿದ್ದು, ನಂತರ ಅತ್ಯಾಚಾರ ಎಸಗಲಾಗಿದೆ ಎಂದು ಕುಟುಂಬ ಸದಸ್ಯರು ದೂರಿದ್ದಾರೆ. ಏತನ್ಮಧ್ಯೆ ಪೊಲೀಸರು ರೇಪ್ ಕೇಸ್ ದಾಖಲಿಸದಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಸಮಜಾಯಿಷಿ ನೀಡಲು ಮುಂದಾಗಿರುವ ಕಾಂಗ್ರೆಸ್ ಶಾಸಕ ಹರೇಂದ್ರಾ ನಿನಾಮಾ, ಇದೊಂದು ಲವ್ ಅಫೇರ್ ಆಗಿದ್ದು, ತಪ್ಪು ಸುದ್ದಿಯಾಗಿ ಹರಿದಾಡುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.