ಕೊಪ್ಪಳ: ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಹೇಳಿದರು.
ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರಗಳ ತೆರೆಯುವ ಕುರಿತಂತೆ ಜಿಲ್ಲಾ ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿ ವತಿಯಿಂದ (ಎಪಿಎಂಸಿ) ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು ಹೆಸರು ಕಾಳು ಪ್ರಸ್ತುತ ಕಾಟಾವಿನ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿಸಬೇಕಾಗಿದೆ. ಬಿತ್ತನೆ ಕ್ಷೇತ್ರವನ್ನು ಆಧಾರವಾಗಿಟ್ಟುಕೊಂಡು ಇಳುವರಿ ಪ್ರಮಾಣ ಅಂದಾಜಿಸಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಖರೀದಿ ಕೇಂದ್ರ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತಂತೆ ಹಾಗೂ ಖರೀದಿ ಕೇಂದ್ರಗಳ ಬಗ್ಗೆ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡುವ ಜೊತೆಗೆ ಬೆಂಬಲ ಬೆಲೆ ಯೋಜನೆಯ ಲಾಭ ಸಿಗುವ ನಿಟ್ಟಿನಲ್ಲಿ ರೈತರಿಗೆ ಮಾಹಿತಿ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖರೀದಿ ಕೇಂದ್ರಗಳ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರ್ದೇಶನ ಬಂದ ತಕ್ಷಣ ಗುರುತಿಸಿದ ಸ್ಥಳಗಳಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಖರೀದಿಸುವ ಹೆಸರು ಕಾಳಿನ ದಾಸ್ತಾನು ಮಾಡುವ ಕುರಿತಂತೆ ಗೋದಾಮುಗಳ ಸ್ಥಳಗಳ ಲಭ್ಯತೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮವಹಿಸಿ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯ ಕಾರ್ಯದರ್ಶಿ ಎಸ್. ಶ್ಯಾಮ್ ಮಾತನಾಡಿ, ಕೃಷಿ ಇಲಾಖೆ ಮಾಹಿತಿ ಆಧಾರದ ಮೇಲೆ ಪ್ರಸ್ತುತ ಜಿಲ್ಲೆಯಲ್ಲಿ 21,307 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಕಾಳು ಬಿತ್ತನೆ ಮಾಡಲಾಗಿದೆ. ಒಂದು ಹೆಕ್ಟೇರ್‌ಗೆ ಅಂದಾಜು 8 ಕ್ವಿಂಟಲ್ ನಂತೆ ಹೆಸರು ಕಾಳು ಸುಮಾರು 1.80 ಲಕ್ಷ ಕ್ವಿಂಟಲ್ ಇಳುವರಿ ಬರುವ ಸಾಧ್ಯತೆ ಇದೆ. ಪ್ರಸ್ತುತ ಹೆಸರು ಕಾಳಿನ ದರವು ರೂ. 6400 ರಿಂದ 7400ವರೆಗೆ ಇದ್ದು, ಕಳೆದ ಬಾರಿಯಂತೆಯೇ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಕೊಪ್ಪಳ ಎಪಿಎಂಸಿ ಹಾಗೂ ತಾಲೂಕಿನ ಹಿರೇ ಸಿಂಧೋಗಿ, ಕುಷ್ಟಗಿ ತಾಲೂಕಿನ ತಾವರಗೇರಾ ಹಾಗೂ ಹನುಮಸಾಗರ, ಕುಕನೂರು ಹಾಗೂ ಯಲಬುರ್ಗಾ ಟಿಎಪಿಎಂಸಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಆರು ಖರೀದಿ ಕೇಂದ್ರ ಪ್ರಾರಂಭಿಸಿಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಎಸಿ ಬಸವಣ್ಣಪ್ಪ ಕಲಶೆಟ್ಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸದಾಶಿವ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಖರೀದಿ ಏಜೆನ್ಸಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.