Advertisement

ಮೆಟ್ರೋಗೆ ನಾಡಪ್ರಭು ಹೆಸರಿಡಿ

11:42 AM Jul 24, 2017 | Team Udayavani |

ಬೆಂಗಳೂರು: “ನಮ್ಮ ಮೆಟ್ರೋ’ಗೆ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ನಾಮಕರಣ ಮಾಡುವಂತೆ ಶ್ರೀಸ್ಪಟಿಕಮಠದ ಶ್ರೀ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದಾರೆ.

Advertisement

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್‌ ಆಯೋಜಿಸಿದ್ದ ಜಾನಪದ ಸಂಭ್ರಮ ಮತ್ತು ಹಿರಿಯ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು, ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾದವರಲ್ಲ. ಸಾಮಾಜಿಕ ನ್ಯಾಯದ ಹರಿಕಾರರು. ಹಾಗಾಗಿ ನಮ್ಮ ಮೆಟ್ರೋಗೆ ಅವರ ಹೆಸರಿಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. 

12ನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರ ಭಾವಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕುವುದನ್ನು ಕಡ್ಡಾಯಗೊಳಿಸಿರುವಂತೆ ಕೆಂಪೇಗೌಡರ ಭಾವಚಿತ್ರವನ್ನು ಕೂಡ ಹಾಕುವ ತೀರ್ಮಾನವನ್ನು ಸರ್ಕಾರ ಕೈಗೊಳ್ಳಬೇಕು. ಹೊಸದಾಗಿ ಸ್ಥಾಪನೆಯಾಗಲಿರುವ ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಕೆಂಪೇಗೌಡರ ಹೆಸರಿಡಬೇಕು. ಜತೆಗೆ ಬೆಂಗಳೂರಿನಲ್ಲಿ 100 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗಬೇಕು.

ಕೆಂಪೇಗೌಡರ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಲು ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಾತಿ ಗಣತಿಯಿಂದ ಸಮುದಾಯವನ್ನು ಛಿದ್ರಗೊಳಿಸುವ ಕೆಲಸ ಆಗುತ್ತದೆ. ಇದರಿಂದ ಐಕ್ಯತೆಗೆ ಧಕ್ಕೆಯಾಗುತ್ತದೆ. ಸರ್ಕಾರ ಜಾತಿಗಣತಿಯನ್ನು ಕೈಬಿಟ್ಟು ಸಮಾಜದ ಐಕ್ಯತೆ ಕಾಪಾಡಬೇಕು ಎಂದು ಸಲಹೆ ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಸತಿ ಸಚಿವ ಎಂ. ಕೃಷ್ಣಪ್ಪ, ಮೇಯರ್‌ ಜಿ. ಪದ್ಮಾವತಿ, ವಿಧಾನ ಪರಿಷತ್‌ ಸದಸ್ಯ ಎ.ಶರವಣ, ನಟ ಶ್ರೀನಗರ ಕಿಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next