Advertisement

ಕರ್ನಾಟಕಕ್ಕೆ ಮೋದಿ ಸರ್ಕಾರ ಮಲತಾಯಿ ಧೋರಣೆ

07:44 AM Mar 12, 2019 | |

ಮೈಸೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ರೈಲು ನಿಲ್ದಾಣ ಬಳಿಯ ಬಾಬು ಜಗಜೀವನರಾಂ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

Advertisement

ಜೆಡಿಎಸ್‌- ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯದ ರೈತರ 43 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದರೂ ಕೇಂದ್ರ ಸರ್ಕಾರ ರೈತರ ಸಾಲಮನ್ನಾಕ್ಕೆ ಮುಂದಾಗುತ್ತಿಲ್ಲ. ಬರ ಪರಿಹಾರ ಸಂಬಂಧ ಅನುದಾನ ನೀಡಿಕೆಯಲ್ಲೂ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ.

ಪಕ್ಕದ ಮಹಾರಾಷ್ಟ್ರಕ್ಕೆ 4710 ಕೋಟಿ ರೂ. ಬರ ಪರಿಹಾರ ನಿಧಿ ಬಿಡುಗಡೆ ಮಾಡಿದರೆ, ಕರ್ನಾಟಕ ರಾಜ್ಯಕ್ಕೆ ಕೇವಲ 900 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸುಳ್ಳು ಆಶ್ವಾಸನೆ: ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಶೇ.50ರಷ್ಟು ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಕಾಲಹರಣ ಮಾಡುತ್ತಿದೆ. ರೈತರ ಆದಾಯ ಹಾಗೂ ಆಹಾರ ಪದಾರ್ಥಗಳ ಉತ್ಪಾದನೆಯನ್ನು ದ್ವಿಗುಣ ಮಾಡುವುದಾಗಿ ಹೇಳಿದ್ದರೂ ಈವರೆಗೆ ಆ ಬಗ್ಗೆ ಕಾರ್ಯೋನ್ಮುಖವಾಗಿಲ್ಲ.

ಬದಲಿಗೆ ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡಲು ರೈತರ ಕೃಷಿ ಭೂಮಿಯನ್ನು ಕಿತ್ತುಕೊಳ್ಳಲು ಸುಗ್ರೀವಾಜ್ಞೆ ತಂದಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗೆ ಹಿಡಿದ ಕೈಗನ್ನಡಿ ಎಂದು ಆರೋಪಿಸಿದರು.

Advertisement

ರೈತರಿಗೆ ಅವಮಾನ: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ದೆಹಲಿಗೆ ಬಂದು ಪ್ರತಿಭಟನೆ ಮಾಡಿದ ರೈತರನ್ನು ಮೋದಿ ಸರ್ಕಾರ ಮಾತನಾಡಿಸಿ, ಅವರ ಸಮಸ್ಯೆ ಆಲಿಸಲಿಲ್ಲ. ಇದೀಗ ಚುನಾವಣೆ ಹೊಸ್ತಿಲಲ್ಲಿ, ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಹಣ ಜಮಾ ಮಾಡುತ್ತಿರುವುದು ರೈತ ಸಮುದಾಯವನ್ನು ಅವಮಾನಿಸದಂತೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಕಾಂಗ್ರೆಸ್‌ ಕಿಸಾನ್‌ ಘಟಕದ ಅಧ್ಯಕ್ಷ ವಸಂತಕುಮಾರ್‌, ಉಪಾಧ್ಯಕ್ಷ ಹೆಡತಲೆ ಮಂಜುನಾಥ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next