ಮಂಗಳೂರು: ಮುಂಬರುವ ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ದುರಂತ, ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಲು ಜಿಲ್ಲೆಯ ಪ್ರತೀ ತಾಲೂಕಿಗೆ 30 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮುಂಬರುವ ಮಳೆಗಾಲ ಸಿದ್ಧತಾ ಕಾರ್ಯಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಪ್ರಾಕೃತಿಕ ವಿಕೋಪ ಸಂದರ್ಭ ಪರಿಹಾರ ನೀಡಲು 20 ಲಕ್ಷ ರೂ. ಹಾಗೂ ತುರ್ತು ಕಾಮಗಾರಿಗೆ 10 ಲಕ್ಷ ರೂ. ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು. ಜಿಲ್ಲೆಗೆ ಪ್ರಾಕೃತಿಕ ವಿಕೋಪದಡಿ 2 ಕೋ. ರೂ. ಹೆಚ್ಚುವರಿ ಅನುದಾನ ಬಿಡುಗಡೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿ ಆಗಿಂದಾಗ್ಗೆ ಸಭೆ ನಡೆಸಿ ಪ್ರಾಕೃತಿಕ ಹಾನಿಗಳ ನಿರ್ವಹಣೆಗೆ ಕ್ರಮಕೈಗೊಳ್ಳಲಿದೆ. ನೆರೆ, ನೀರು ನುಗ್ಗುವ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮಕೈಗೊಳ್ಳಬೇಕು. ಈಜುಗಾರರ, ಬೋಟ್‌ಗಳ ಸಿದ್ಧತೆ ಮಾಡಿಕೊಳ್ಳಬೇಕು. ಮರ ಬಿದ್ದು ರಸ್ತೆ ತಡೆ ಉಂಟಾದಾಗ ಕೂಡಲೇ ತೆರವುಗೊಳಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯಚರಿಸುವ ಕಂಟ್ರೋಲ್ ರೂಂ ನಿರಂತರ ಕಾರ್ಯಚರಿಸುತ್ತಿದ್ದು, ದೂರವಾಣಿ 1077ಗೆ ಸಾರ್ವಜನಿಕರು ಕರೆ ಮಾಡಬಹುದು. ಇದೇ ರೀತಿ ತಾಲೂಕು ಕಚೇರಿಯಲ್ಲೂ ಕಂಟ್ರೋಲ್ ರೂಂ. ತೆರೆಯಲಾಗುವುದು. ನಿರ್ಮಾಣ ಕಟ್ಟಡಗಳಲ್ಲಿ ನೀರು ನಿಲ್ಲದಂತೆ ಮುಂಜಾಗರೂಕತೆ ವಹಿಸಬೇಕು. ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾ ವಹಿಸಬೇಕು ಎಂದು ಡಾ| ಜಗದೀಶ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕಳೆದ 20 ವರ್ಷಗಳಿಂದ ನೆರೆ ಉಂಟಾಗಿರುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ನದೀ ಪಾತ್ರದ ನಿವಾಸಿಗಳಿಗೆಅಗತ್ಯ ಮುಂಜಾಗರೂಕತೆ ನೀಡಬೇಕು. ಮೆಸ್ಕಾಂ, ಅರಣ್ಯ ಹಾಗೂ ನಗರ ಸ್ಥಳೀಯ ಸಂಸ್ಥೆ, ಗ್ರಾ. ಪಂ., ತಾ. ಪಂ. ಮತ್ತು ತಾಲೂಕು ಕಚೇರಿಗಳಲ್ಲಿ ಕಂಟ್ರೋಲ್ ರೂಂ. ತೆರೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತೀವ್ರ ಮಳೆ ಇದ್ದ ಸಂದರ್ಭ ಆಯಾ ತಾ| ಮಟ್ಟದಲ್ಲಿ ತಹಶೀಲ್ದಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ, ಆಯಾ ತಾಲೂಕಿನ ಶಾಲೆಗಳಿಗೆ ರಜೆ ನೀಡಬಹುದು ಎಂದು ಅವರು ತಿಳಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್. ರವಿ, ಅಪರ ಜಿಲ್ಲಾಧಿಕಾರಿ ಕುಮಾರ್, ಪುತ್ತೂರು ಸಹಾಯಕ ಆಯುಕ್ತ ಡಾ| ರಘುನಂದನ ಮೂರ್ತಿ, ಮನಪಾ ಆಯುಕ್ತ ಮಹಮ್ಮದ್ ನಝೀರ್ ಉಪಸ್ಥಿತರಿದ್ದರು.