ಬೆಂಗಳೂರು: ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ದೇಶದಲ್ಲಿ ನಕ್ಸಲ್ ಕೇಂದ್ರಿತ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ವಿಧಾನಸೌಧ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಗಿರೀಶ್ ಕಾರ್ನಾಡ್ “ನಾನು ನಗರ ನಕ್ಸಲ್’ ಎಂಬ ಬೋರ್ಡ್‌ನ್ನು ಕುತ್ತಿಗೆಗೆ ಹಾಕಿಕೊಂಡಿದ್ದರು.
ಆ ಮೂಲಕ ನಕ್ಸಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಾಗೂ ಭೀಮಾಕೊರೆಗಾಂವ್ ಹಿಂಸಾ ಕೃತ್ಯದ ಘಟನೆ ಸಂಬಂಧ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.
ಅಲ್ಲದೆ, ಸ್ವಾಮಿ ಅಗ್ನಿವೇಶ್ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್ ರೈ, ಉಮರ್ ಖಾಲೀದ್, ಕನ್ನಯ್ಯ ಕುಮಾರ್, ಕೆ.ಎಸ್.ಭಗವಾನ್ ಕೂಡ ಈ ರೀತಿಯ ನಕ್ಸಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ತನಿಖೆ ನಡೆಸಿ ಎಂದೂ ದೂರಿನಲ್ಲಿ ಕೋರಿದ್ದಾರೆ.
ಈ ಬಗ್ಗೆ ದೂರು ಸ್ವೀಕರಿಸಿರುವ ವಿಧಾನಸೌಧ ಠಾಣೆ ಪೊಲೀಸರು, ಘಟನೆ ನಡೆದ ಸ್ಥಳ ಹಲಸೂರು ಗೇಟ್ ಠಾಣೆ ವ್ಯಾಪ್ತಿಗೆ ಬರುವುದರಿಂದ ದೂರನ್ನು ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದರು.