Advertisement
ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬುಧವಾರ ಎನ್‌ಡಿಆರ್‌ಎಫ್ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಒತ್ತಾಯಿಸಿದರು.
ಇದಕ್ಕೂ ಮುನ್ನ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಡಾ| ಎಲ್. ಹನುಮಂತಯ್ಯ ಅವರೊಂದಿಗೆ ಅಮಿತ್ ಶಾ ಅವರನ್ನು ಭೇಟಿಯಾದ ಸಿಎಂ, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲೂಕುಗಳಲ್ಲಿ 223 ತಾಲೂಕುಗಳು ಬರಪೀಡಿತವಾಗಿವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ಸೆ. 22ರಂದು ಸಲ್ಲಿಸಿದ್ದು, ಬರ ಅಧ್ಯಯನ ತಂಡವು ಅಕ್ಟೋಬರ್ 4ರಿಂದ 9ರ ನಡುವೆ ಭೇಟಿ ನೀಡಿ, ವರದಿ ಸಲ್ಲಿಸಿದೆ. ಅದಾದ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಹೀಗಾಗಿ ಅ.20ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌ಡಿಆರ್‌ಎಫ್ ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ರಾಜ್ಯ ಸರ್ಕಾರವು ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ 3 ತಿಂಗಳು ಕಳೆದಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,171.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.
Related Articles
Advertisement
ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೇ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.
ನಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ಮನವಿ
ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಕೊಬ್ಬರಿ ಕುರಿತು ಸಮಾಲೋಚನೆ ನಡೆಸಿರುವ ಸಚಿವ ಕೃಷ್ಣ ಬೈರೇಗೌಡ, ಕೊಬ್ಬರಿ ಬೆಳೆಯನ್ನು ಕೇಂದ್ರ ಸರಕಾರವೇ ನ್ಯಾಫೆಡ್ ಮುಖಾಂತರ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕೊಬ್ಬರಿ ಬೆಳೆಯುವ ರೈತರು ಅನೇಕರಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಕೊಬ್ಬರಿ ಬೆಳೆಗಾರರಿದ್ದಾರೆ. ಆದರೆ, ಈಗ ಕೊಬ್ಬರಿ ಬೆಲೆ ತೀವ್ರ ಕುಸಿತ ಕಂಡಿದೆ. ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ಧಾರೆ. ಹೀಗಾಗಿ ಕೇಂದ್ರ ಸರ್ಕಾರ ನ್ಯಾಫೆಡ್ ಮುಖಾಂತರ ಮಾರುಕಟ್ಟೆಯಿಂದ ನೇರವಾಗಿ ಕೊಬ್ಬರಿ ಖರೀದಿಸಬೇಕು. ಈ ಪ್ರಕ್ರಿಯೆ ತತ್‌ಕ್ಷಣ ಆರಂಭವಾಗಬೇಕು ಎಂದು ಕೇಂದ್ರ ಸಚಿವರ ಬಳಿ ಮನವಿ ಮಾಡಲಾಗಿದೆ ಎಂದರು .