ಮಲ್ಲಿಕಟ್ಟೆ: ರಾಜ್ಯದಲ್ಲಿ 5 ವರ್ಷಗಳಲ್ಲಿ ದಕ್ಷ, ಭ್ರಷ್ಟಚಾರ ರಹಿತ ಹಾಗೂ ಜನಪರ ಆಡಳಿತ ನೀಡಿ ಜನಮೆಚ್ಚುಗೆಗೆ ಪಾತ್ರವಾಗಿರುವ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೇರಿಸುವಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಸಹಿತ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವುದು ಅವಶ್ಯ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಜರಗಿದ ಪಕ್ಷದ ಜಿಲ್ಲಾ ಘಟಕದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳಂಕರಹಿತ , ಅಭಿವೃದ್ಧಿ ಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರಕಾರದ ಮೇಲೆ ಕಳಂಕ ತರಲು ವಿಪಕ್ಷ ಬಿಜೆಪಿ ಆನೇಕ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿ ಇದಕ್ಕೆ ನಿದರ್ಶನವಾಗಿದೆ. ವಿಪಕ್ಷಗಳ ಈ ಹುನ್ನಾರ, ಅಪಪ್ರಚಾರಗಳನ್ನು ವಿಫಲಗೊಳಿಸುವ ಕಾರ್ಯವನ್ನು ಕಾರ್ಯಕರ್ತರು ಸಮರ್ಥರೀತಿಯಲ್ಲಿ ಮಾಡಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಜಿಲ್ಲಾ ಉಸ್ತುವಾರಿ ಯು.ಬಿ. ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ಶಾಸಕರಾದ ಅಭಯಚಂದ್ರ ಜೈನ್, ಜೆ.ಆರ್. ಲೋಬೋ, ಮೊದಿನ್ ಬಾವಾ, ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ಅರುಣ್ ಮಾಚಯ್ಯ, ರಾಜ್ ಕುಮಾರ್, ಸವಿತಾ ರಮೇಶ್, ಐವನ್ ನಿಗ್ಲಿ, ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ ಎಸ್.ಪಿ. ದಿನೇಶ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮೇಯರ್ ಕವಿತಾ ಸನಿಲ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಗೇರು ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮುಖಂಡರಾದ ಬಿ. ಇಬ್ರಾಹಿಂ, ಕಳ್ಳಿಗೆ ತಾರಾನಾಥ ಶೆಟ್ಟಿ, ಬಲರಾಜ ರೈ, ಶಶಿಧರ ಹೆಗ್ಡೆ, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ನವೀನ್ ಡಿ’ಸೋಜಾ, ಸಂತೋಷ್ ಕುಮಾರ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಸದಾಶಿವ ಉಳ್ಳಾಲ್, ಶೇಖರ್ ಕುಕ್ಕೇಡಿ, ನಜೀರ್ ಬಜಾಲ್, ಸೇವಾದಳದ ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.
ಸಂಘಟನೆಯಲ್ಲಿ ತೊಡಗಿ
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ವಾಗತಿಸಿದರು. ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿಯುಳಿದಿವೆ. ಪಕ್ಷದ ಎಲ್ಲ ಬ್ಲಾಕ್‌ಗಳ, ಘಟಕಗಳು, ಬೂತ್‌ಗಳ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.