ಶಿವಮೊಗ್ಗ: ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಕುರಿತಂತೆ ಅಗತ್ಯ ತರಬೇತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಸೂಚನೆ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಲೆಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸುವ ಕುರಿತು ಹಾಗೂ ಈ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ಶಾಲೆಗಳಲ್ಲಿ ಈಗಾಗಲೇ ಆರಂಭಿಸಲಾಗಿರುವ ಇಕೋ ಕ್ಲಬ್ ಸದಸ್ಯ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಕುರಿತಾಗಿ ಪ್ರಾಥಮಿಕ ತರಬೇತಿ ನೀಡಬಹುದಾಗಿದೆ. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ಶಿಬಿರವನ್ನು ಆಯೋಜಿಸಬೇಕು. ಪ್ರತಿ ಶಾಲೆಯಿಂದ ಆಯ್ಕೆ ಮಾಡಲಾಗುವ ಸಂಪನ್ಮೂಲ ವ್ಯಕ್ತಿಗಳು ತಮ್ಮ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವಿಪತ್ತು ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಮಾತ್ರವಲ್ಲದೆ ಈ ಕುರಿತು ಅರಿವು ಮೂಡಿಸುವ ಕಾಯಕ್ರಮಗಳನ್ನು ಆಯೋಜಿಸಬೇಕು. ಈ ಕುರಿತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬಹುದಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಆಯಾ ಶಾಲೆಗಳಲ್ಲಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅವರು ಸೂಚನೆ ನೀಡಿದರು.
ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸುವ ಪ್ರತಿಯೊಂದು ಶಾಲೆಗಳಲ್ಲಿರುವ ಅಡುಗೆ ಸಿಲಿಂಡರ್ ಮತ್ತು ಒಲೆಯ ಸುರಕ್ಷತೆಯನ್ನು ವರ್ಷಕ್ಕೊಮ್ಮೆ ಪರಿಶೀಲನೆ ನಡೆಸಿ ಖಾತ್ರಿಪಡಿಸಬೇಕು. ವಯರ್ ಬದಲಾವಣೆ ಇತ್ಯಾದಿಗಳನ್ನು ನಿಗದಿತ ಸಮಯಕ್ಕೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಂಪೌಂಡ್ ನಿರ್ಮಿಸಲು ಅವಕಾಶವಿದ್ದು, ಇನ್ನೂ ಕಂಪೌಂಡ್ ಇಲ್ಲದಿರುವ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಪ್ರಕೃತಿ ವಿಕೋಪ ಪರಿಹಾರ ಅಡಿಯಲ್ಲಿ ಪ್ರಸ್ತುತ ಜಿಲ್ಲೆಯ 126ಶಾಲೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಇನ್ನುಳಿದ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿ ಅಂದಾಜುಪಟ್ಟಿಯನ್ನು ಸಲ್ಲಿಸುವಂತೆ ಅವರು ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸುಮಂಗಳ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.