ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿ ಮೂಲಕ ರಾಜ್ಯದ ಗಡಿಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.
ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್‌ಗಳಿಗೆ ಅವರು ರವಿವಾರ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿ ನಿಯೋಜಿತ ಅಧಿ ಕಾರಿಗಳು ಹಾಗೂ ತಂಡಗಳ ಸಿಬ್ಬಂದಿ ಜತೆ ಚರ್ಚೆ ನಡೆಸಿದ ಅವರು, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ವಿಶೇಷ ಸರ್ವೇಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರು ಎರಡೂ ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ವರದಿ ನೆಗೆಟಿವ್ ಹೊಂದಿರುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಒಂದು ವೇಳೆ ಕುಟುಂಬದಲ್ಲಿ ಮರಣ ಅಥವಾ ತುರ್ತು ವೈದ್ಯಕೀಯ ಚಿಕಿತ್ಸೆಯ ಹಿನ್ನೆಲೆಯಲ್ಲಿ ರಾಜ್ಯವನ್ನು ಪ್ರವೇಶಿಸ ಬಯಸುವ ಪ್ರಯಾಣಿಕರಿಗೆ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ (ರ್ಯಾಟ್) ಮಾಡಿಸಬೇಕು. ಅದರ ವರದಿ ನೆಗೆಟಿವ್ ಇದ್ದರೆ ಅವಕಾಶ ಕಲ್ಪಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೆರೆಯ ರಾಜ್ಯದಿಂದ ಬಸ್ ಮೂಲಕ ಆಗಮಿಸುವ ಪ್ರಯಾಣಿಕರ ಕೋವಿಡ್ ಪರೀಕ್ಷಾ ವರದಿಯನ್ನು ನಿರ್ವಾಹಕರು ಪರಿಶೀಲಿಸಬೇಕು. ಖಾಸಗಿ ವಾಹನಗಳ ಮೂಲಕ ಆಗಮಿಸುವ ಎಲ್ಲ ವಾಹನಗಳನ್ನು ಪರಿಶೀಲಿಸಿ ಕೋವಿಡ್ ನೆಗೆಟಿವ್ ವರದಿ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ವಾಹನ ಪರಿಶೀಲನೆಗೆ ಸಂಬಂಧಿ ಸಿದಂತೆ ಸೂಕ್ತ ದಾಖಲೆಗಳನ್ನು ನಿರ್ವಹಿಸಬೇಕು ಎಂದು ಗಡಿ ಚೆಕ್ ಪೋಸ್ಟ್‌ಗಳಲ್ಲಿ ನಿಯೋಜಿತ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ ನಿರ್ದೇಶನ ನೀಡಿದರು.
ಇದೇ ವೇಳೆ ಕಾಗವಾಡ ಬಳಿಯ ಚೆಕ್ ಪೋಸ್ಟ್‌ಗೂ ಜಿಲ್ಲಾಧಿಕಾರಿ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಚೆಕ್ ಪೋಸ್ಟ್ ಗಳಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಇದೇ ವೇಳೆ ಚಿಕ್ಕೋಡಿ ಬಳಿಯ ಮಾಂಜರಿ ಸೇತುವೆಯ ಬಳಿ ಕೃಷ್ಣಾ ನದಿಯ ಹರಿವು ಪ್ರಮಾಣವನ್ನು ಜಿಲ್ಲಾಧಿಕಾರಿ ಹಿರೇಮಠ ಪರಿಶೀಲಿಸಿದರು. ಚಿಕ್ಕೋಡಿ ಉಪ ವಿಭಾಗಾ ಧಿಕಾರಿ ಯುಕೇಶ್ ಕುಮಾರ್ ಅವರು ಕೋವಿಡ್ ತಡೆಗಟ್ಟುವುದಕ್ಕೆ ಸಂಬಂಧಿ ಸಿದಂತೆ ಸರ್ಕಾರದ ಮಾರ್ಗಸೂಚಿಗಳ ಪಾಲನೆ ಹಾಗೂ ಪ್ರವಾಹ ನಿರ್ವಹಣೆಯ ಕ್ರಮಗಳನ್ನು ವಿವರಿಸಿದರು. ತಹಶೀಲ್ದಾರರು, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸ್ಥಳೀಯ ಅಧಿಕಾರಿಗಳು ಇದ್ದರು.