ಬೆಂಗಳೂರು: ಮೇಕೆದಾಟು ಯೋಜನೆ ಜಾರಿ ಸಂಬಂಧ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ. ದೆಹಲಿಯಲ್ಲಿರುವ ಸಿಎಂ ಕುಮಾರಸ್ವಾಮಿ, ಬುಧವಾರ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆ ಕುರಿತು ಚರ್ಚಿಸಿದರು. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು
ಸಮಸ್ಯೆ ಏನಾದರೂ ಇದ್ದರೆ ಬಗೆಹರಿಸಲಾಗುವುದು ಎಂದು ಗಡ್ಕರಿ ಭರವಸೆ ನೀಡಿದರು.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ಪ್ರಸ್ತಾಪಿಸಿದರು. ವಾಸ್ತವವಾಗಿ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಹೀಗಾಗಿ, ಎರಡೂ ರಾಜ್ಯಗಳ ಸಿಎಂಗಳ ಸಭೆ ಕರೆದು ವಿಷಯ ಇತ್ಯರ್ಥಪಡಿಸುವಂತೆ ಮನವಿ ಮಾಡಿದೆ. ಇದಕ್ಕೆ ಒಪ್ಪಿದ್ದಾರೆ ಎಂದರು.
ಮಹದಾಯಿ ನ್ಯಾಯಾಧಿಕರಣ ತೀರ್ಪು ಸಂಬಂಧ ಗೋವಾ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿರುವುದರಿಂದ ರಾಜ್ಯದ ಪಾಲಿನ ನೀರಿನ ಬಳಕೆಗೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆಯೂ ಮನವಿ ಮಾಡಲಾಗಿದೆ. ಈ ಮನವಿಗೂ ಕೇಂದ್ರ ಸಚಿವರು ಸ್ಪಂದಿಸಿ ಗೋವಾ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದರು.