ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ, ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳು 23 ವರ್ಷದ ನೇಹಾ ಹಿರೇಮಠ (Neha Hiremath) ಕೊಲೆಗೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಅಂದಾಜು 483 ಪುಟಗಳ ದೋಷಾರೋಪಣ ಪಟ್ಟಿ (Charge sheet) ಸಲ್ಲಿಸಿದರು.
ಎ. 18ರಂದು ಇಲ್ಲಿನ ವಿದ್ಯಾನಗರದ ಪ್ರತಿಷ್ಠಿತ ಕಾಲೇಜಿನ ಆವರಣದಲ್ಲೇ ನೇಹಾಳ ಹಳೆಯ ಸಹಪಾಠಿ ಸವದತ್ತಿ ಮೂಲದ ಫಯಾಜ್ ಎಂಬಾತನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.
ಕೊಲೆಯಾದ ನೇಹಾಳು ಫಯಾಜ್‌ನ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಾಗಿದ್ದ ಅವನು ತನ್ನ ಹಳೆ ಸಹಪಾಠಿಯನ್ನು ಕೊಲೆ ಮಾಡಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನೇಹಾಳ ಕೊಲೆ ಖಂಡಿಸಿ ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿಯಿಂದ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಎನ್‌ಕೌಂಟರ್ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಸೇರಿದಂತೆ ಕೊಲೆಯಾದ ನೇಹಾಳ ತಂದೆ, ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಕೂಡ ಒತ್ತಾಯಿಸಿದರು.
ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸೋಮವಾರ ಸಿಐಡಿ ಡಿವೈಎಸ್‌ಪಿ ಎನ್.ಎಚ್. ಪೈಕ್ ಅವರು ಸ್ಥಳೀಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು 3ನೇ ಜೆಎಂಎಫ್‌ಸಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.