ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ) ಕೇವಲ ಒಂದು ಸರ್ಕಾರದ ನೀತಿಯಲ್ಲ, ಆದರೆ ಇದು ಇಡೀ ದೇಶದ ಶಿಕ್ಷಣ ನೀತಿಯಾಗಿದೆ. ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ ಈ ಶಿಕ್ಷಣ ನೀತಿಯನ್ನು ಸ್ಫೂರ್ತಿಯಿಂದ ಜಾರಿಗೊಳಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆಪ್ಟೆಂಬರ್ 07, 2020) ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಗವರ್ನರ್ ಸಮ್ಮೇಳನದ ವರ್ಚುವಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿದಂತೆ ದೇಶದಲ್ಲಿ ವ್ಯಾಪಕವಾಗಿ ಚರ್ಚೆ ನಡೆಯಬೇಕಾಗಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ತಿಳಿವಳಿಕೆ ಮೂಡಿಸಬೇಕಾಗಿದೆ. ಎನ್ ಇಪಿಯ ಮುಖ್ಯ ಗುರಿಯೇ ಶಿಕ್ಷಣದ ಯಶಸ್ಸು ಅಡಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಕಲಿಕೆ ಕೇವಲ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜನರ ಮನಸ್ಸಿನಲ್ಲಿರುವ ಪ್ರಶ್ನೆಗಳಿಗೆ ಮತ್ತು ಅನುಮಾನಗಳಿಗೆ ಉತ್ತರ ನೀಡಿದ ಮೇಳೆಯೇ ಅಂತಿಮವಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ದೇಶದ ಯುವಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಾಲಾ, ಕಾಲೇಜು, ವಿವಿ ಮಟ್ಟದಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀತಿಯನ್ನು ಪರಿಚಯ ಮಾಡಿಸುವುದು ನೂತನ ಶಿಕ್ಷಣ ನೀತಿಯ ಗುರಿಯಾಗಿದೆ ಎಂದು ಮೋದಿ ಹೇಳಿದರು.