Advertisement

ನವ ಬೆಂಗಳೂರು ನಿರ್ಮಾಣ ಅಗತ್ಯ

11:32 PM Mar 13, 2020 | Lakshmi GovindaRaj |

ವಿಧಾನಸಭೆ: ನವಿ ಮುಂಬಯಿ ಮಾದರಿಯಲ್ಲಿ ನವ ಬೆಂಗಳೂರು ನಿರ್ಮಾಣ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದ್ದು, ಆ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಹ್ಯಾರೀಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್‌, ಬೆಂಗಳೂರಿಗೆ 50 ಕಿ.ಮೀ.ದೂರದಲ್ಲಿ ನವ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚೆಗಳು ನಡೆಯಬೇಕಿದೆ ಎಂದು ತಿಳಿಸಿದರು.

Advertisement

ಇದೀಗ ಬೆಂಗಳೂರಿಗೆ ಕೈಗಾರಿಕೆಗಳು ಬರಲು ಹಿಂದೇಟು ಹಾಕುತ್ತಿವೆ. ಇಲ್ಲಿ ಒತ್ತಡ ಹೆಚ್ಚಾಗಿದೆ. ಹೀಗಾಗಿಯೇ ಸರ್ಕಾರ ಉತ್ತರ ಕರ್ನಾಟಕ ಸೇರಿ ಇತರ ಪ್ರಮುಖ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಮುಂದಾಗಿದೆ. ಈಗಾಗಲೇ ಹುಬ್ಬಳ್ಳಿ ಯಲ್ಲಿ ಬಂಡವಾಳ ಹೂಡಿಕೆ ಸಮಾವೇಶ ನಡೆಸಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ಕಲಬುರಗಿ ಯಲ್ಲಿ ನಡೆಸಲಾಗುವುದು. ಮಂಗಳೂರಿನಲ್ಲಿ ಎರಡು ದಿನಗಳ ಸಮಾವೇಶ ನಡೆಸಲು ಮನವಿ ಬಂದಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರಿನ ಒತ್ತಡ ಕಡಿಮೆ ಮಾಡಲು ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾಭಿವೃದ್ಧಿಗೆ ಒತ್ತು ನೀಡಲು ಸರ್ಕಾರ ನಿರ್ಧರಿಸಿದೆ. 2 ಹಾಗೂ 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಸಮಾವೇಶ ಸಹ ಮಾಡಲಿದೆ ಎಂದು ತಿಳಿಸಿದರು.

ಬೆಂಗಳೂರಿಗೆ ಹತ್ತಿರ ಇರುವ ಮೈಸೂರಿನಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಅವಕಾಶ ಗಳಿದ್ದು, ಇತ್ತೀಚೆಗೆ ನಾನು ಭೇಟಿ ನೀಡಿದ್ದ ಸಂದರ್ಭ ದಲ್ಲಿ ಅಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಸಂಘದ ಜತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಅನುಷ್ಟಾನ, ಬೇಲಿಕೇರಿ ಬಂದರು ಅಭಿವೃದ್ಧಿ ಯಾದರೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಾಕಷ್ಟು ಸಹಾಯವಾಗಲಿದೆ.

2019-24 ನೂತನ ಕೈಗಾರಿಕಾ ನೀತಿಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ಪೂರಕ ವಾಗುವ ಅಂಶಗಳನ್ನು ಸೇರ್ಪಡೆ ಮಾಡಲಾಗು ವುದು. ಹಲವು ವಿನಾಯಿತಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್‌ನ ರೂಪಕಲಾ ಶಶಿಧರ್‌, ಜೆಡಿಎಸ್‌ನ ವೆಂಕಟರಾವ್‌ ನಾಡಗೌಡ ಸೇರಿದಂತೆ ಹಲವರು ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಕೋಲಾರ, ರಾಯಚೂರು, ಬೀದರ್‌ ಭಾಗಗಳಲ್ಲಿ ಕೈಗಾರಿಕೆ ಸ್ಥಾಪಿಸಿ, ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಲು ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next