Advertisement

ಹೊಸ ಸಿಂಥೆಟಿಕ್ ಟ್ರ್ಯಾಕ್ ನಲ್ಲಿ ಕಂಗೊಳಿಸುತ್ತಿದೆ ಕಂಠೀರವ ಕ್ರೀಡಾಂಗಣ; ಸಚಿವರಿಂದ ಪರಿಶೀಲನೆ

03:25 PM Feb 24, 2022 | Team Udayavani |

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

Advertisement

ಕಂಠೀರವ ಕ್ರೀಡಾಂಗಣದಲ್ಲಿ ನಿರ್ಮಿಸಿದ್ದ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದ ಪರಿಣಾಮವಾಗಿ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿತ್ತು. ಎರಡು ವರ್ಷಗಳಿಂದ ನಡೆದ ಸಿಂಥೆಟಿಕ್‌ ಟ್ರ್ಯಾಕ್‌ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಇಂದು ಕ್ರೀಡಾಂಗಣಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸಿಂಥೆಟಿಕ್ ಟ್ರ್ಯಾಕ್ ಅಳವಡಿಕೆ, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಿದರು.

ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಮೆರಿಕಾದಿಂದ ತರಿಸಿದ ಹೊಸ ಸಿಂಥೆಟಿಕ್ ಟ್ರ್ಯಾಕ್‌ ಅಳವಡಿಸಲಾಗಿದೆ. ದೆಹಲಿ ಮೂಲದ ಸಂಸ್ಥೆಯು ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ನಡೆಸಿದ್ದು, 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಹಳೇ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ ಹಾಗೂ ಟೂರ್ನಿಗಳ ಆಯೋಜನೆಗೆ ಸಮಸ್ಯೆ ಆಗಿತ್ತು. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ, ಟೂರ್ನಿಗಳ ಆಯೋಜನೆಗೆ ಅನುಕೂಲವಾಗಲಿದೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಲು ಅನುಕೂಲ ಆಗಲಿದೆ. ನಮ್ಮ ಸರ್ಕಾರ ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಹತ್ತಾರು ಯೋಜನೆಗಳನ್ನು ರೂಪಿಸಿದೆ. ಒಲಂಪಿಕ್ಸ್ ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದು, ಈಗಾಗಲೇ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ತರಬೇತಿ ನೀಡಲಾಗ್ತಿದೆ. ಸಿದ್ದಿಮಕ್ಕಳಲ್ಲಿರುವ ವಿಶೇಷ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಅಥ್ಲೆಟಿಕ್ಸ್‌ಗಳಿಗೆ ಅನುಕೂಲವಾಗಲಿದ್ದು, ಏಪ್ರಿಲ್‌ನಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಹೊಸ ಟ್ರ್ಯಾಕ್ ಉದ್ಘಾಟಿಸಲಿದ್ದಾರೆ ಎಂದು ಸಚಿವರು ಹೇಳಿದರು.

ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದ ರಾಜ್, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ರಾಜುವೇಲು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next