Advertisement

ಜನರ ಋಣ ತೀರಿಸುವುದು ನಮ್ಮ ಕರ್ತವ್ಯ : ಸಚಿವ ಸೀತಾರಾಂ 

10:40 AM Mar 24, 2018 | Team Udayavani |

ಮಡಿಕೇರಿ: ನಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ ಜನರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಋಣ ತೀರಿಸುವ ಕಾರ್ಯ ಮಾಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ.ಆರ್‌. ಸೀತಾರಾಂ ತಿಳಿಸಿದ್ದಾರೆ. ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಖಾಸಗಿ ಬಸ್‌ ನಿಲ್ದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಡಗಿನ ಜನರ ಬೇಡಿಕೆಗಳನ್ನು ಪೂರೈಸುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಪ್ರಮುಖ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸಿದೆ. ಆದರೂ ಇಲ್ಲಿನ ಮತದಾರರು ಬಿಜೆಪಿ ಬಗ್ಗೆ ಹೆಚ್ಚು ಒಲವು ತೋರುತ್ತಿರುವುದು ಬೇಸರದ ವಿಚಾರವೆಂದರು.

Advertisement

ಖಾಸಗಿ ಬಸ್‌ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ಮುಂದಿನ ದಿನಗಳಲ್ಲೂ ಸಹ ಇನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆ ನಿಟ್ಟಿನಲ್ಲಿ ನಗರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಎಲ್ಲರೂ ಸಹಕರಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. ಕಳೆದ 15-20 ವರ್ಷಗಳಿಂದ ಖಾಸಗಿ ಬಸ್‌ ನಿಲ್ದಾಣ ನನೆಗುದಿಗೆ ಬಿದ್ದಿತ್ತು, ಈಗ ಕಾರ್ಯರೂಪಕ್ಕೆ ತರಲಾಗಿದೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಖಾಸಗಿ ಬಸ್‌ ನಿಲ್ದಾಣದಲ್ಲಿ ಇನ್ನೂ 2 ವಾರದಲ್ಲಿ ಸಂಚಾರಕ್ಕೆ ಅವಕಾಶ ಮಾಡಲಾಗುವುದು. ಆ ದಿಸೆಯಲ್ಲಿ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ನಗರಸಭೆ ಜೊತೆಗೂಡಿ ಏಕಮುಖ ವಾಹನ ಸಂಚಾರದ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು. 

ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ಖಾಸಗಿ ಬಸ್‌ ನಿಲ್ದಾಣ ನಿರ್ಮಾಣ ಮಾಡಬೇಕೆಂಬುದು ಕಳೆದ 30 ವರ್ಷಗಳ ಕನಸಾಗಿತ್ತು, ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಇಂದು ನನಸು ಮಾಡಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರು, ಮಾಜಿ ಸಚಿವರಾದ ಎಂ.ಎಂ. ನಾಣಯ್ಯ, ಸುಮಾ ವಸಂತ್‌, ವಿಧಾನ ಪರಿಷತ್‌ ಸದಸ್ಯರಾದ ವೀಣಾ ಅಚ್ಚಯ್ಯ, ಕೆ.ಪಿ. ಚಂದ್ರಕಲಾ ಹೀಗೆ ಎಲ್ಲರ ಸಹಕಾರದಿಂದ ಖಾಸಗಿ ಬಸ್‌ ನಿಲ್ದಾಣ ನಿರ್ಮಾಣ ಮಾಡಲು ಹೋರಾಟ ಮಾಡಿದ್ದೇನೆ ಎಂದು ಕಾವೇರಮ್ಮ ಸೋಮಣ್ಣ ಅವರು ಸ್ಮರಿಸಿದರು. ವಿಧಾನ ಪರಿಷತ್‌ ಸದಸ್ಯರಾದ ವೀಣಾ ಅಚ್ಚಯ್ಯ ಮಾತನಾಡಿದರು. 

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್‌, ಜಿ.ಪಂ.ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರ, ನಗರಸಭಾ ಸದಸ್ಯರಾದ ಪ್ರಕಾಶ್‌ ಆಚಾರ್ಯ, ಲೀಲಾ ಶೇಷಮ್ಮ, ಶ್ರೀಮತಿ ಬಂಗೇರಾ, ಜುಲೇಕಾಬಿ, ಪೀಟರ್‌, ವೀಣಾಕ್ಷಿ, ಅಮಿನ್‌ ಮೊಹಿಸಿನ್‌, ಮನ್ಸೂರ್‌,  ಉದಯಕುಮಾರ್‌, ವೆಂಕಟೇಶ್‌, ಗಿಲ್ಬರ್ಟ್‌, ಉಸ್ಮಾನ್‌, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಗೋಪಾಲ ಕೃಷ್ಣ, ಪೌರಾಯುಕ್ತರಾದ ಬಿ. ಶುಭಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕೆ.ಎನ್‌. ಸ್ವಾಮಿ ಇತರರು ಹಾಜರಿದ್ದರು.   

ನೂತನ ಮಾರುಕಟ್ಟೆ ಉದ್ಘಾಟನೆ 
ನಗರದ ಮಹದೇವಪೇಟೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಅರ್‌.ಸೀತಾರಾಂ ಅವರು ಸಾರ್ವಜನಿಕರಿಗೆ ಸಮರ್ಪಿಸಿದರು.    

Advertisement

ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ: ಪ್ರತಿಭಟನೆ


ನಗರದಲ್ಲಿ ನಿರ್ಮಾಣಗೊಂಡಿರುವ ನೂತನ ಖಾಸಗಿ ಬಸ್‌ ನಿಲ್ದಾಣದ ಉದ್ಘಾಟನಾ ಸಮಾರಂಭದ ಸಂದರ್ಭ ನಗರ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.  ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಮತ್ತು ಉದ್ಘಾಟನೆಯ ಫ‌ಲಕದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರ ಹೆಸರನ್ನು ಕೈಬಿಡಲಾಗಿದೆಯೆಂದು ಆರೋಪಿಸಿ ಬಿಜೆಪಿ ಪ್ರಮುಖರು ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್‌ ಸರಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಕಾರರು ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್‌ ಪರ ಜೈಕಾರ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next