Advertisement

NH ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಂಡು ತ್ವರಿತವಾಗಿ ಪೂರ್ಣಗೊಳಿಸಿ: ಶೋಭಾ ಕರಂದ್ಲಾಜೆ

11:47 PM Aug 23, 2023 | Team Udayavani |

ಉಡುಪಿ:ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ತ್ವರಿತ ವಾಗಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವುಮಾಡಿ ಕೊಡಬೇಕು ಎಂದು ಕೇಂದ್ರ (ರಾಜ್ಯ ಖಾತೆ) ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169, 169ಎ ಗೆ ಸಂಬಂಧಿಸಿದ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾ.ಹೆ. 66 ಮತ್ತು ರಾ.ಹೆ. 169ಎ ಯ ಕಾಮಗಾರಿಗಳು ಪ್ರಗತಿಯ ಲ್ಲಿದ್ದು, ಮಳೆಯ ಹಿನ್ನೆಲೆಯಲ್ಲಿ ಸ್ಥಗಿತ ಗೊಳಿಸಲಾಗಿತ್ತು. ಪ್ರಸ್ತುತ ಮಳೆ ಕಡಿಮೆ ಇರುವುದರಿಂದ ಕಾಮಗಾರಿಗಳನ್ನು ಪುನರಾರಂಭಿಸಿ, ತ್ವರಿತವಾಗಿ ಕೈಗೊಳ್ಳುವುದರೊಂದಿಗೆ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಸಂತೆಕಟ್ಟೆ ಜಂಕ್ಷನ್‌:
24×7 ಕಾಮಗಾರಿ
ರಾ.ಹೆ. 66ರ ಸಂತೆಕಟ್ಟೆ ಜಂಕ್ಷನ್‌ನಲ್ಲಿನ ಓವರ್‌ಪಾಸ್‌ ಕಾಮಗಾರಿ ಯನ್ನು ಕೈಗೊಳ್ಳುವಾಗ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮತೆಗೆದುಕೊಂಡು ಮಣ್ಣು ಕುಸಿಯದಂತೆ ಹಾಗೂ ರೀಟೈನಿಂಗ್‌ ವಾಲ್‌ ನಿರ್ಮಿಸಲು ಹೆಚ್ಚು ಕಾರ್ಮಿಕರನ್ನು ನಿಯೋಜಿಸುವುದರೊಂದಿಗೆ 24×7 ಕಾರ್ಯ ಸಾಗಬೇಕು ಎಂದರು.

ಕರಾವಳಿ ಜಂಕ್ಷನ್‌ನಿಂದ ಮಲ್ಪೆ ಬಂದರು ವರೆಗಿನ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಬೇಕು. ಈ ರಸ್ತೆಯಲ್ಲಿ ಹೆಚ್ಚು ಪ್ರವಾಸಿಗರು ಹಾಗೂ ಮೀನುಗಾರಿಕೆ ಚಟುವಟಿಕೆಯ ವಾಹನಗಳು ಸಂಚರಿಸುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಬದಲಿ ಮಾರ್ಗವನ್ನು ಜಿಲ್ಲಾಡಳಿತ ಸೂಚಿಸಬೇಕು ಎಂದರು.

Advertisement

ರಾ.ಹೆ. 169ರ ಇಂದ್ರಾಳಿ ರೈಲ್ವೇ ಸೇತುವೆಯ ಕಾಮಗಾರಿಯನ್ನು ನವೆಂಬರ್‌ ಒಳಗಾಗಿ ಪೂರ್ಣಗೊಳಿಸ ಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ತಯಾರಿ ಮಾಡಿಕೊಳ್ಳಬೇಕು. ಈಗಾಗಲೇ ಸೇತುವೆಯ ಮೇಲೆ ಸಂಚರಿಸುತ್ತಿರುವ ವಾಹನಗಳ ಸಂಚಾರಕ್ಕೆ ಅಗತ್ಯ ಮಾರ್ಗಸೂಚಿಯನ್ನು ಪೊಲೀಸ್‌ ಅಧೀಕ್ಷಕರ ಸೂಚನೆಯನ್ವಯ ಕೈಗೊಂಡು, ಕಾಮಗಾರಿ ವೇಳೆ ಸಂಚಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಉಡುಪಿ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಯಾವುದೇ ಕೊರತೆಗಳು ಆಗದಂತೆ ನೋಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ರೈಲು ಹಳಿ ದಾಟುವ ರಸ್ತೆಗಳ ನಿರ್ಮಾಣಕ್ಕೆ ಅನುಮತಿ ಪತ್ರವನ್ನು ನೀಡಬೇಕೆಂದು ರೈಲ್ವೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಯಶ್‌ಪಾಲ್‌ ಸುವರ್ಣ ಮಾತನಾಡಿ, ರಾ.ಹೆ. ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೊಂಡಾಗ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ, ಪೊಲೀಸ್‌ ಅಧೀಕ್ಷಕ ಅಕ್ಷಯ್‌ ಎಂ. ಹಾಕೆ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್‌., ರಾ.ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್‌ ಅಜ್ಮಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸೂಚನೆ
ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಜನಸಾಮಾನ್ಯರಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಅವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next