Advertisement

SP ನಾಯಕ ಅಖಿಲೇಶ್ ಯಾದವ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

07:35 PM Jun 15, 2023 | Team Udayavani |

ಲಕ್ನೋ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಲಕ್ನೋ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.

Advertisement

ಭೇಟಿ ಕುರಿತು ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು.ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ

ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು ಎಂದು ನಿಖಿಲ್ ವಿವರಿಸಿದ್ದಾರೆ.

Advertisement

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು, ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ನಿಖಿಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next