ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್ ಕುಮಾರ್ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ನಿತೀಶ್ ಕುಮಾರ್ ಜೊತೆಗೆ ಜೆಡಿಯು ನಾಯಕರಾದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಪಣತೊಟ್ಟಂತಿದ್ದ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜತೆ ಮುಂಚೂಣಿಯಲ್ಲಿ ನಿಂತು ಇಂಡಿಯಾ ಮೈತ್ರಿಕೂಟ ರಚನೆಗೆ ಕಾರಣರಾಗಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತ್ತೆ ಬಿಜೆಪಿ ಜತೆಗೆ ನಿತೀಶ್ ಕುಮಾರ್ ಸೇರಿದ್ದಾರೆ.