ಪಾಟ್ನಾ: ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬುಧವಾರ( ಆಗಸ್ಟ್ 10) ದಾಖಲೆಯ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ:ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗವರ್ನರ್ ಪಾಗು ಚೌಹಾಣ್ ಅವರು ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣವಚನ ಸ್ವೀಕರಿಸಿದ ನಂತರ ತೇಜಸ್ವಿ ಯಾದವ್ ಸಿಎಂ ನಿತೀಶ್ ಕುಮಾರ್ ಅವರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದರು. ಕಳೆದ 22 ವರ್ಷಗಳಲ್ಲಿ ನಿತೀಶ್ ಕುಮಾರ್ ಅವರು 8ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದಂತಾಗಿದೆ.
ನಿತೀಶ್ ಕುಮಾರ್ ಮಂಗಳವಾರ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಆರ್ ಜೆಡಿ ಸೇರಿದಂತೆ ಮಿತ್ರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.
2000ನೇ ಇಸವಿಯಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಮೊದಲ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2014ರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಜಯಗಳಿಸಿತ್ತು. ನಂತರ 2014ರಲ್ಲಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಯು ನಿರೀಕ್ಷಿತ ಸ್ಥಾನ ಗಳಿಸದಿರುವುದಕ್ಕೆ ನೈತಿಕ ಹೊಣೆ ಹೊತ್ತು ನಿತೀಶ್ ಕುಮಾರ್ ಅಧಿಕಾರದಿಂದ ಕೆಳಗಿಳಿದಿದ್ದರು. ಬಳಿಕ ಒಂದು ವರ್ಷದೊಳಗೆ ಬದಲಾದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ನಿತೀಶ್ ಮತ್ತೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು.