ಉಡುಪಿ: ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕ ಕ್ರಮ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಕೇಂದ್ರ ಕೃಷಿ (ರಾಜ್ಯಖಾತೆ) ಸಚಿವೆ ಶೋಭಾ ಕರಂದ್ಲಾಜೆ ಅವರ ಸೂಚನೆಯಂತೆ ಗುರುವಾರ ದಿಲ್ಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಶಾಸಕರು ಇದರಿಂದಾಗಬಹುದಾದ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿದರು. ಗಡ್ಕರಿ ಅವರು ಈ ವಿಷಯದ ಕುರಿತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಡಿ. 5ರಂದು ಸಭೆ ನಡೆಸುವುದಾಗಿ ತಿಳಿಸಿದರು.
ಸುರತ್ಕಲ್ ಟೋಲ್ ಶುಲ್ಕವನ್ನು ಸೇರಿಸಿ ಹೆಜಮಾಡಿಯಲ್ಲಿ ವಸೂಲು ಮಾಡುವುದರಿಂದ ಉಡುಪಿ ಜಿಲ್ಲೆಯ ವಾಹನ ಸವಾರರು ದುಬಾರಿ ಶುಲ್ಕ ಪಾವತಿಸ ಬೇಕಾಗುತ್ತದೆ. ಉಡುಪಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ವಾಹನಗಳಿಗೂ ಸುರತ್ಕಲ್‌ನ ಸ್ಥಳೀಯ ವಾಣಿಜ್ಯ ಉದ್ದೇಶ ವಾಹನಗಳಿಗೂ ಸಮಸ್ಯೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರ ಆಪ್ತ ಕಾರ್ಯದರ್ಶಿ ಸಾಕತ್ ಸಿಂಗ್ ರಾಣಾವತ್, ಹೆಚ್ಚುವರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ಗೌಡ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.