ನವದೆಹಲಿ: 2024ರ ಲೋಕಸಭಾ ಚುನಾವಣೆಯ ನಡುವೆ 3,500 ಕೋಟಿ ರೂಪಾಯಿ ತೆರಿಗೆ ಬಾಕಿ ವಸೂಲಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ (ಏ.01) ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಇದನ್ನೂ ಓದಿ:Charlie Dean: ವನಿತಾ ಕ್ರಿಕೆಟ್ ನಲ್ಲಿ ದಾಖಲೆ ಬರೆದ ಇಂಗ್ಲೆಂಡ್ ನ ಚಾರ್ಲಿ ಡೀನ್
ಆದಾಯ ತೆರಿಗೆ ಇಲಾಖೆ ಪರವಾಗಿ ಸುಪ್ರೀಂಗೆ ಆಗಮಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಜೂನ್ ತಿಂಗಳಿಗೆ ವಿಚಾರಣೆಯನ್ನು ಮುಂದೂಡಿದೆ.
ಈ ಅರ್ಜಿಯ ವಿಚಾರಣೆ ಆಗುವವರೆಗೂ ಆದಾಯ ತೆರಿಗೆ ಇಲಾಖೆ ಯಾವುದೇ ಕಠಿನ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಜಸ್ಟೀಸ್ ಬಿ.ವಿ.ನಾಗರತ್ನಮ್ಮ ಮತ್ತು ಜಸ್ಟೀಸ್ ಆಗಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡುವುದು ಬೇಕಾಗಿಲ್ಲ ಎಂಬುದು ಆದಾಯ ತೆರಿಗೆ ಇಲಾಖೆ ಅಭಿಪ್ರಾಯವಾಗಿದೆ ಎಂದು ಮೆಹ್ತಾ ಅವರು ಸುಪ್ರೀಂಗೆ ಮನವರಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.
ಕಾಂಗ್ರೆಸ್ ಪಕ್ಷ ಈಗಾಗಲೇ ಬಾಕಿ ಇರುವ 134 ಕೋಟಿ ರೂಪಾಯಿ ತೆರಿಗೆಯನ್ನು ಪಾವತಿಸಿದ್ದು, ಬಳಿಕ ಆದಾಯ ತೆರಿಗೆ ಇಲಾಖೆ 1,700 ಕೋಟಿ ರೂಪಾಯಿ ಬಾಕಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿತ್ತು ಎಂದು ಮೆಹ್ತಾ ಹೇಳಿದರು.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸುಪ್ರೀಂಕೋರ್ಟ್ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ ಕಾಂಗ್ರೆಸ್ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆ ವೇಳೆ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಂಚು ಇದಾಗಿದೆ ಎಂದು ಆರೋಪಿಸಿದರು.