ಮೈಸೂರು: ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಒಪ್ಪಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ: ಕಪ್ಪು ಬಣ್ಣದ ಬಟ್ಟೆ ಧರಿಸಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿರಂತರವಾಗಿ ಅನ್ಯಾಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿಷಯದಲ್ಲಿ ರಾಜ್ಯ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ. ಪ್ರಾಧಿಕಾರದಿಂದ ಮುಂದಿನ ದಿನಗಳಲ್ಲಿ ಅಪಾಯ ಎದುರಾಗಲಿದೆ. ಇಡೀ ಜಲಾಶಯಗಳ ನೀರಿನ ಹಂಚಿಕೆ ಪ್ರಾಧಿಕಾರಕ್ಕೆ ಹೋಗಲಿದೆ. ಪ್ರಾಧಿಕಾರ ರಚನೆಯಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಕುಡಿವ ನೀರಿಗೂ ಹಾಹಾಕಾರ ಎದುರಾಗುತ್ತೆ: ಕಾವೇರಿ ಕಣಿವೆಯ ಕೆಆರ್‌ಎಸ್, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಲ್ಲಿನ ನೀರು ಈಗಾಗಲೇ ಖಾಲಿಯಾಗಿದೆ. ಅಲ್ಲದೇ ಒಳಹರಿವು ಬರುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಇದರಿಂದಾಗಿ ಜಲಾಶಯದ ಸುತ್ತಮುತ್ತ ಗ್ರಾಮಗಳೂ ನೀರಿಲ್ಲದೆ ನರಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಂದು ಬೆಂಗಳೂರಲ್ಲಿ ಪ್ರತಿಭಟನೆ: ಅಧಿಕಾರಿಯೊಬ್ಬರು ಗೋಡ್ಸೆ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದು ಸರಿ ಎನ್ನುವ ಹೇಳಿಕೆ ನೀಡಿದ್ದಾರೆ. ಅವರ ಪ್ರತಿಮೆಗಳನ್ನು ತೆರವುಗೊಳಿಸಬೇಕು ಎಂದಿದ್ದಾರೆ. ಅವರ ವಿರುದ್ಧ ಜೂ.4 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಹಿಂದಿ ಹೇರಿಕೆ ಬೇಡ: ಕರ್ನಾಟಕದಲ್ಲಿ ಹಿಂದಿ ಹೇರಿಕೆ ಸಲ್ಲದು. ಕರ್ನಾಟಕದಲ್ಲಿ ಕನ್ನಡವೇ ಪ್ರಧಾನವಾಗಬೇಕು. ಕನ್ನಡ ಉಳಿವು-ರಕ್ಷಣೆ ಬಗ್ಗೆ ಕನ್ನಡಿಗರು ಮುಂದಾಗಬೇಕು. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲೇ ಇರಬೇಕು ಎಂದು ಹೇಳಿದರು. ಅಲ್ಲದೇ, ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಆದರೆ, ಹಿಂದಿ ಹೇರಿಕೆಯನ್ನು ಖಂಡಿಸುತ್ತೇನೆ ಎಂದು ದೂರಿದರು. ಪ್ರತಿಭಟನೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ನಾನು ವಿರೋಧಿಸುತ್ತೇನೆ. ಪ್ರಾಧಿಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಲಿದ್ದು ಅಪಾಯ ಎದುರಾಗಲಿದೆ. ಇದನ್ನು ರಾಜ್ಯ ಸರ್ಕಾರ ಬಹಿಷ್ಕರಿಸಬೇಕು.
-ವಾಟಾಳ್ ನಾಗರಾಜ್, ಕನ್ನಡ ಚಳವಳಿ ವಾಟಾಳ್ ಪಕ್ಷ