ಹಾಸನ: ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಪ್ರಕರಣ ಸಂಬಂಧ ಎಚ್.ಡಿ. ರೇವಣ್ಣ ಕುಟುಂಬದ ಮೇಲೆ ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾತನಾಡಿ, ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನಾಧರಿಸಿ ಆರೋಪಿಗಳನ್ನು ಬಂಧಿಸಿ ಕಾನೂನು ಪ್ರಕಾರ ತನಿಖೆ ನಡೆಸಲಾಗುತ್ತಿದೆ. ಸೂರಜ್ ಪ್ರಕರಣದಲ್ಲಿ ಹೊಳೆನರಸೀಪುರದಲ್ಲಿ ಕೇಸ್ ದಾಖಲಾದ ಅನಂತರವೇ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ. ಒಂದೇ ಕುಟುಂಬದ ಮೇಲೆ ಉದ್ದೇಶಪೂರ್ವಕವಾಗಿ ಕಾನೂನು ಕ್ರಮ ಆಗಿಲ್ಲ. ಪ್ರಕರಣ ನಡೆದಿದೆ ಎಂಬುದರ ಮೇಲೆಯೇ ಕ್ರಮಬದ್ಧವಾಗಿ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸಂಶಯ ಬೇಡ ಎಂದರು.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಎರಡು ತಿಂಗಳಾದರೂ ಬಂಧಿಸಿಲ್ಲ ಎಂಬ ಪ್ರಶ್ನೆಗೆ, ಅಗತ್ಯವಿದ್ದಾಗ ಎಸ್‌ಐಟಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತದೆ. ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದಾದರೆ ವಿಚಾರಣೆಯ ಅಗತ್ಯವಿಲ್ಲ ಎಂದಿರಬಹುದು ಎಂದರು.