ಉಡುಪಿ: ಕಳೆದ ಹಲವು ದಿನಗಳಿಂದ ಭಾರಿ ಕೋವಿಡ್-19 ಸೋಂಕಿತರನ್ನು ಕಂಡಿದ್ದ ಉಡುಪಿ ಜಿಲ್ಲೆಯ ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಯಾಕೆಂದರೆ ಇಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಕಂಡು ಬಂದಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇಂದು 103 ಜನರು ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರೆಲ್ಲರೂ ಚಿಕಿತ್ಸೆ ಮುಗಿಸಿ ನಂತರದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಕಾರಣ ನಿಗಧಿತ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲದಿದ್ದರೂ ರಾಜ್ಯದ ಕೋವಿಡ್ ಪಟ್ಟಿಯಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 947 ಜನರಿಗೆ ಸೋಂಕು ತಾಗಿದೆ. 769 ಸೋಂಕಿತರನ್ನು ಹೊಂದಿರುವ ಕಲಬುರಗಿ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ.
ಮತ್ತೊಂದು ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಇಂದು 23 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಅದರಲ್ಲಿ ಇಬ್ಬರು ಮಹಾರಾಷ್ಟ್ರದಿಂದ ಬಂದಿದ್ದರೆ, ಉಳಿದ 21 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಈ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2010ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 161 ಜನರಿಗೆ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆ ಕಂಡಿದೆ. ಇಂದು ಒಟ್ಟು 164 ಜನರು ಗುಣಮುಖರಾಗಿದ್ದು, ಒಟ್ಟು 2605 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 66 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.