ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಜಾಹೀರಾತು ಫಲಕಗಳ ಅಳವಡಿಕೆ ನಿಷೇಧಿಸಿರುವುದನ್ನು ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಸಿರುವ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಗುರುವಾರ ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ನಗರದಲ್ಲಿ ಒಂದು ವರ್ಷಕಾಲ ಬ್ಯಾನರ್, ಹೋರ್ಡಿಂಗ್ಸ್ ಹಾಗೂ ಫ್ಲೆಕ್ಸ್ ಸೇರಿದಂತೆ ಎಲ್ಲಾ ಬಗೆಯ ಜಾಹೀರಾತು ಫಲಕಗಳು ಅಳವಡಿಸುವುದನ್ನು ನಿಷೇಧಿಸಿ ಬಿಬಿಎಂಪಿ ಕೈಗೊಂಡಿರುವ ನಿರ್ಣಯ ರದ್ದುಪಡಿಸುವಂತೆ ಕೋರಿ ಮೆ. ಪಾಪ್ಯೂಲರ್ ಅಡ್ವಟೈಸರ್ ಸೇರಿ 11 ಜಾಹೀರಾತು ಏಜೆನ್ಸಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ.ನರೇಂದರ್ ಅವರಿದ್ದ ಪೀಠ ಈ ಸೂಚನೆ ನೀಡಿತು.
ಅಲ್ಲದೇ ಅನಧಿಕೃತ ಜಾಹೀರಾತು ಫಲಕ ಅಳವಡಿಕೆ ಸಂಬಂಧ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇರಿಸಿ, ಯಾವ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಬೇಕು ಎಂಬುದರ ಕುರಿತು ಸ್ಪಷ್ಟನೆ ಪಡೆಯುವಂತೆ ರಿಜಿಸ್ಟ್ರಾರ್ ಅವರಿಗೆ ಇದೇ ವೇಳೆ ನ್ಯಾಯಮೂರ್ತಿಗಳು ನಿರ್ದೇಶಿಸಿದರು.
ಗುರುವಾರ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಬಿಬಿಎಂಪಿಗೆ ತೆರಿಗೆ ಪಾವತಿಸಿಯೇ ಅರ್ಜಿದಾರರು ತಮ್ಮ ಜಾಹೀರಾತು ಫಲಕಗಳನ್ನು ಅಳವಡಿಸಿದ್ದಾರೆ. ಆದರೆ, ಬಿಬಿಎಂಪಿ ಇದೀಗ ಬಲವಂತವಾಗಿ ಅವುಗಳನ್ನು ತೆರವುಗೊಳಿಸುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಈ ಅರ್ಜಿಗಳನ್ನು ಯಾರು ವಿಚಾರಣೆ ನಡೆಸಬೇಕು ಎಂಬುದರ ಕುರಿತು ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟನೆ ನೀಡುವರೆಗೂ, ಅರ್ಜಿದಾರರ ವಿರುದ್ಧ ಬಿಬಿಎಂಪಿ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಸೂಚಿಸಿದರು.