ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶ ಪರಿಸರ ಸೂಕ್ಷ್ಮವಲಯ ಎಂದು ಘೋಷಿಸುವ ಕುರಿತಾದ ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ವಾಪಸ್ ಪಡೆಯಲು ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳ ಬೇಕೆಂದು ಪತ್ರದಲ್ಲಿ ಮನವಿ ಮಾಡಲು ನಿರ್ಧರಿಸಲಾಗಿದೆ.
ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಇದೊಂದು ಸೂಕ್ಷ್ಮ ವಿಚಾರ ಆಗಿದ್ದರಿಂದ ರಾಜ್ಯದ ಹಿತಾಸಕ್ತಿ ದೃಷ್ಟಿ ಯಿಂದ ಡಾ. ಕಸ್ತೂರಿರಂಗನ್ ವರದಿ ಜಾರಿಗೊಳಿಸದಂತೆ ಕೇಂದ್ರಕ್ಕೆ ಪತ್ರ ಬರೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೆಳಗಾವಿಯಿಂದ ಮಂಗಳೂರುವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಬರುವ ಹತ್ತು ಜಿಲ್ಲೆಗಳ 33 ತಾಲೂಕುಗಳ 1276 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲು ಕಸ್ತೂರಿ ರಂಗನ್ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಶೇಕಡಾ 20 ರಷ್ಟು ಅರಣ್ಯ ಪ್ರದೇಶವಿರುವ ಗ್ರಾಮಗಳನ್ನೂ ಈ ವರದಿಯ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ. ಆ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ರಾಜ್ಯದಲ್ಲಿ ಅಭಯಾರಣ್ಯ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶವೆಂದು ಸಾಕಷ್ಟು ಅರಣ್ಯವನ್ನು ಈಗಾಗಲೇ ಘೋಷಣೆ ಮಾಡಿದೆ. ಅಲ್ಲದೆ ಅರಣ್ಯ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ವಹಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯತಿಗಳ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಎಲ್ಲ ಪಂಚಾಯತಿಗಳಿಂದಲೂ ವರದಿ ತಿರಸ್ಕರಿಸುವಂತೆ ಅಭಿಪ್ರಾಯ ಬಂದಿದೆ. ಅಲ್ಲದೇ ವಿಧಾನಸಭೆಯಲ್ಲಿಯೂ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು.
ಅಧಿಸೂಚನೆ ವಾಪಸ್ ಪಡೆಯುವಂತೆ ಕೇಂದ್ರಕ್ಕೆ ರಾಜ್ಯ ಪತ್ರ