ಹುಬ್ಬಳ್ಳಿ: ಇತರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ಸೋಂಕು ನಮ್ಮಲ್ಲಿ ನಿಯಂತ್ರಣದಲ್ಲಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಸೋಂಕು ಹಬ್ಬುತ್ತಿರುವ ಸಂದರ್ಭದಲ್ಲಿ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಿದ್ದು, ಅಂದಿನ ಸಂದರ್ಭದಲ್ಲಿ ಲಾಕ್‌ಡೌನ್ ಮಾಡದಿದ್ದರೆ ಆರೋಗ್ಯ ಸೌಲಭ್ಯದಿಂದ ಹಿಡಿದು ಪ್ರತಿಯೊಂದು ಸಮಸ್ಯೆ ಅನುಭವಿಸಬೇಕಾಗಿತ್ತು. ಲಾಕ್‌ಡೌನ್ ಅವಧಿಯಲ್ಲಿ ಆರೋಗ್ಯ ವ್ಯವಸ್ಥೆಯನ್ನು ಸಾಕಷ್ಟು ಮೇಲ್ದರ್ಜೆಗೇರಿಸಲಾಗಿದೆ. ಆದರೆ ಇದೀಗ ಲಾಕ್‌ಡೌನ್ ಅಗತ್ಯವಿಲ್ಲ ಎಂದರು.
ಲಾಕ್‌ಡೌನ್ ಇಲ್ಲ ಎಂದು ಜನರು ಮೈ ಮರೆಯುವಂತಿಲ್ಲ. ನಿರ್ಲಕ್ಷ್ಯ ವಹಿಸಿದರೆ ಸೋಂಕು ತಗಲುವ ಸಾಧ್ಯತೆಗಳಿದ್ದು, ಸರ್ಕಾರದ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮುಂದಿನ 4-5 ತಿಂಗಳು ಎಚ್ಚರ ವಹಿಸುವುದು ಅತ್ಯಗತ್ಯವಾಗಿದೆ. ಆರೋಗ್ಯ ಸೇವೆ ಸಮರ್ಪಕವಾಗಿ ದೊರೆಯುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದರು.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದೆ ಬರಬೇಕು. ಆರಂಭದಲ್ಲಿ ಪಿಪಿಇ ಕಿಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳು ಇರಲಿಲ್ಲ. ಇದೀಗ ನಿತ್ಯ 4 ಲಕ್ಷ ಪಿಪಿಇ ಕಿಟ್‌ಗಳನ್ನು ಉತ್ಪಾದಿಸಲಾಗುತ್ತಿದೆ. ಕೆಲ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಕೊಂಡು ಚಿಕಿತ್ಸೆ ನೀಡಲು ಮುಂದಾಗಬೇಕು. ಈ ಕುರಿತು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಅದರಂತೆ ರಾಜ್ಯ ಸರ್ಕಾರಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಚರ್ಚಿಸಿದ್ದು, ಸಕಾರಾತ್ಮಕ ಸ್ಪಂದನೆ ನೀಡಿರುವ ಮಾಹಿತಿಯಿದೆ ಎಂದರು.
ಚೀನಾ ವಿಚಾರದಲ್ಲಿ ಪ್ರತ್ಯುತ್ತರ ನೀಡಲು ಭಾರತೀಯ ಸೇನೆ ಸರ್ವಸನ್ನದ್ಧವಾಗಿದ್ದು, ತಕ್ಕ ಉತ್ತರವನ್ನೂ ನೀಡುತ್ತಿದೆ. ಈ ವಿಚಾರದಲ್ಲಿ ಸೇನೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ದೇಶದ ನಾಯಕತ್ವ ಸದೃಢವಾಗಿದ್ದು, ಮಾನಸಿಕ ಹಾಗೂ ಭೌತಿಕ ಒತ್ತಡಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ ಪುಟಿದೇಳುವ ಕೆಲಸ ಮಾಡುತ್ತಿದ್ದು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ ಎಂಬುದನ್ನು ಅರ್ಥಮಾಡಿಕೊಳ್ಳು ವವರೆಗೂ ಅದು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರೆತು ಆಡಳಿತ ಮಾಡಿದ ಪರಿಣಾಮ ಇಂದಿಗೂ ಕೆಲ ಕ್ಷೇತ್ರಗಳನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ.
-ಪ್ರಹ್ಲಾದ ಜೋಶಿ, ಕೇಂದ್ರ ಸಚಿವ