ಬೆಂಗಳೂರು: ಬಹುತೇಕ ವಿದ್ಯಾರ್ಥಿಗಳು ಖಾಸಗಿ ಹಾಗೂ ಸರ್ಕಾರಿ ಬಸ್‌ಗಳಲ್ಲಿ ಪರೀಕ್ಷೆಗೆ ಬಂದಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರಗಳಿಗೆ ಬಸ್ ಸೌಲಭ್ಯ ದೊರಕದೇ ಯಾವೊಬ್ಬ ವಿದ್ಯಾರ್ಥಿಗೂ ಸಮಸ್ಯೆ ಆಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ಉಚಿತ ಬಸ್ ಸೇವೆ ಒದಗಿಸಲಾಗಿತ್ತು. ಅನೇಕರು ಖಾಸಗಿ ವ್ಯವಸ್ಥೆ ಮೂಲಕವೂ ಪರೀಕ್ಷೆಗೆ ಬಂದಿದ್ದಾರೆ. ಯಾವುದೇ ವಿದ್ಯಾರ್ಥಿಗೂ ಸಮಸ್ಯೆ ಆಗಿಲ್ಲ ಎಂದರು.
ಹೊರ ರಾಜ್ಯಗಳಿಂದ 1889 ವಿದ್ಯಾರ್ಥಿಗಳು ರಾಜ್ಯಕ್ಕೆ ಆಗಮಿಸಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿ¨ªಾರೆ. ಈ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಜಿಲ್ಲಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶ ಮಾಡಿಕೊಡಲಾಗಿತ್ತು. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ವಿಶೇಷ ಪಾಸ್ ನೀಡಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕಂಟೈನ್ಮೆಂಟ್ ವಲಯಗಳಿಂದ ಹಾಜರಾಗುವ ವಿದ್ಯಾರ್ಥಿಗಳಿಗೆ ಒಂದು ವಿಶೇಷ ಕೊಠಡಿ ಹಾಗೂ ಇತರೆ ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಒಂದು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಇಂಗ್ಲಿಷ್ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ನಕಲು ಮಾಡಿ ಸಿಕ್ಕಿಬಿದ್ದಿಲ್ಲ, ಯಾವುದೇ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯೂ ಆಗಿಲ್ಲವೆಂದರು.
ದ್ವಿತೀಯ ಪಿಯುಸಿ 39 ವಿಷಯಗಳ ಪೈಕಿ 26 ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶುಕ್ರವಾರದಿಂದ ಪುನರ್ ಆರಂಭವಾಗಲಿರುವ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಉಪನ್ಯಾಸಕ ವೃಂದ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಂ.ಟಿ.ರೇಜು ಸುದ್ದಿಗೋಷ್ಠಿಯಲ್ಲಿದ್ದರು.