ಮುಂಬೈ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಸೋಮವಾರ ಟೀಕಿಸಿದ್ದಾರೆ.
ಸಣ್ಣ ಪಕ್ಷಗಳನ್ನು ಅಧಿಕಾರದಿಂದ ದೂರವಿಡುವುದು ಬಿಜೆಪಿಯ ಅಜೆಂಡಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ನೆಲವಾದ ನೆರೆಯ ಥಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪವಾರ್ ಹೇಳಿದ್ದಾರೆ.
2014 ರ ಸಾರ್ವತ್ರಿಕ ಚುನಾವಣೆಯ ನಂತರ ಕೇಂದ್ರ ಸರ್ಕಾರ ಹಲವಾರು ಭರವಸೆಗಳನ್ನು ನೀಡಿತು, ಆದರೆ ಅದು ಎಂದಿಗೂ ಒಂದೇ ಒಂದು ಭರವಸೆಯನ್ನು ಈಡೇರಿಸಲಿಲ್ಲ, ಪ್ರಧಾನಿ ದೇಶದ ಪ್ರತಿಯೊಬ್ಬ ವ್ಯಕ್ತಿಗೆ ಮನೆ ನೀಡುವುದಾಗಿ ಭರವಸೆ ನೀಡಿದ್ದರು, ಆದರೆ ಸರ್ಕಾರ ಅದನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಪವಾರ್ ಹೇಳಿದರು.
ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ತನಿಖಾ ಸಂಸ್ಥೆಗಳನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಪವಾರ್ ಆರೋಪಿಸಿದರು.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಆಘಾಡಿ ಸರ್ಕಾರದ ವಿರುದ್ಧ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಮತ್ತು ಇತರ 39 ಶಾಸಕರು ಬಂಡಾಯವೆದ್ದರು. ಬಳಿಕ, ಶಿಂಧೆ ಅವರು ಬಿಜೆಪಿ ಬೆಂಬಲದೊಂದಿಗೆ ಜೂನ್ 30ರಂದು ಮುಖ್ಯಮಂತ್ರಿಯಾಗಿ, ದೇವೇಂದ್ರ ಫಡವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಎನ್‌ಸಿಪಿಯ -ಅನಿಲ್ ದೇಶಮುಖ್ ಮತ್ತು ನವಾಬ್ ಮಲಿಕ್ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಪ್ರಸ್ತುತ ಜೈಲಿನಲ್ಲಿದ್ದಾರೆ.