ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ ನಲ್ಲಿ ತೀವ್ರ ಹಿನ್ನಡೆ ಉಂಟಾಗಿದ್ದು, ಸಿಬಿಐ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಐಎನ್ ಎಕ್ಸ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಾಜಿ ವಿತ್ತ ಸಚಿವ ಚಿದಂಬರಂ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಮತ್ತು ಸಿಬಿಐ ಕಸ್ಟಡಿಗೆ ನೀಡುವಂತೆ ವಿಚಾರಣಾ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಸಲ್ಲಿಸಿದ ಮೇಲ್ಮನವಿಯನ್ನೂ ಸುಪ್ರೀಂ ಪೀಠ ವಿಚಾರಣೆ ನಡೆಸಿದೆ.
ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಈಗ ನಿರೀಕ್ಷಣಾ ಜಾಮೀನು ಪ್ರಶ್ನೆ ಉದ್ಭವಿಸುವುದಿಲ್ಲ. ಹೀಗಾಗಿ ರೆಗ್ಯುಲರ್ ಜಾಮೀನು ಪಡೆಯಲು ವಿಚಾರಣಾಧೀನ ನ್ಯಾಯಾಲಯದ ಮೊರೆ ಹೋಗುವಂತೆ ಸುಪ್ರೀಂಕೋರ್ಟ್ ಚಿದಂಬರಂ ಪರ ವಕೀಲರಿಗೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ಈಗಾಗಲೇ ಪಿ.ಚಿದಂಬರಂಗೆ ಐದು ದಿನಗಳ ಕಸ್ಟಡಿ ವಿಧಿಸಿತ್ತು. ಈ ನಿಟ್ಟಿನಲ್ಲಿ ರೆಗ್ಯುಲರ್ ಜಾಮೀನಿಗಾಗಿ ಚಿದಂಬರಂ ಸಿಬಿಐ ವಿಶೇಷ ಕೋರ್ಟ್ ಮೆಟ್ಟಿಲೇರಬೇಕಾಗಿದೆ.
ಈಗ ಸುಪ್ರೀಂಕೋರ್ಟ್ ಪಿ.ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಬಂಧಿಸದಂತೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಿದೆ.