ಚಾಮರಾಜನಗರ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರನ್ನು ವರ್ಗಾವಣೆ ಮಾಡಲಾಗುವುದೆಂಬ ವಿಷಯ ಕೇಳಿಬರುತ್ತಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರ ಅವರನ್ನು ಇನ್ನೂ ಎರಡು ವರ್ಷಗಳವರೆಗೆ ಬೇರೆಡೆಗೆ ವರ್ಗಾವಣೆ ಮಾಡಬಾರದು ಎಂದು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಸ್ವಾಮಿ (ಪಾಪು) ಒತ್ತಾಯಿಸಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಬಿ.ಕಾವೇರಿ ಅವರು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಜಿಲ್ಲೆಯು ಪ್ರಗತಿಯತ್ತ ಸಾಗುತ್ತಿದೆ. ಅವರು ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದು, ಯಾವುದೇ ಗಲಭೆ, ಕೋಮುಗಲಭೆಗಳಿಗೆ ಅವಕಾಶ ಮಾಡಿಕೊಡದೇ ಚುನಾವಣೆ ನಡೆಸಿದ್ದಾರೆ. ಅಲ್ಲದೆ, ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ್ದಾರೆ ಎಂದರು.
ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ: ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ, ಪಾರದರ್ಶನಕವಾಗಿ ನಡೆಸಲು ಮತ್ತು ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡದೆ ಜಿಲ್ಲೆಯಲ್ಲೇ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಸಮರ್ಪಕ ತನಿಖೆಗೆ ಆದೇಶ: ಚಾಮುಲ್‌ನಲ್ಲಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರ ಬಗ್ಗೆ ಜಿಲ್ಲಾಧಿಕಾರಿಗಳು ನಾಲ್ವರು ಅಧಿಕಾರಿಗಳ ತಂಡ ರಚಿಸಿ ಸಮರ್ಪಕವಾದ ತನಿಖೆಗೆ ಆದೇಶ ನೀಡಿರುವುದನ್ನು ಸ್ವಾಗತಿಸುತ್ತೇವೆ. ಸುಳ್ವಾಡಿ ವಿಷಪ್ರಸಾದ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಿ, ಮೃತರ ಕುಟುಂಬಗಳು ಹಾಗೂ ನೊಂದವರಿಗೆ ಚಿಕಿತ್ಸೆ ಹಾಗೂ ಪರಿಹಾರ ಕೊಡಿಸಿದ್ದಾರೆ. ಆ ಸಂದರ್ಭದಲ್ಲಿ ಖುದ್ದಾಗಿ ನಿಂತು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅನೇಕ ರೋಗಿಗಳು ಅಪಾಯದಿಂದ ಪಾರಾಗಲು ಡೀಸಿ ಕೈಗೊಂಡ ತತ್‌ಕ್ಷಣದ ನಿರ್ಧಾರಗಳು ಕಾರಣ ಎಂದರು.
ನಗರಸಭೆ ಅಕ್ರಮ ಚಟುವಟಿಕೆಗಳ ತಾಣ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಅವರನ್ನು ವರ್ಗಾವಣೆ ಮಾಡುವ ಹುನ್ನಾರ ನಡೆಯುತ್ತಿದೆ. ಅವರನ್ನು ಯಾವುದೇ ಕಾರಣಕ್ಕೂ ಸರ್ಕಾರ ವರ್ಗಾವಣೆ ಮಾಡಬಾರದು. ನಗರಸಭೆಯು ಅಕ್ರಮ ಚಟುವಟಿಕೆಗಳ ತಾಣವಾಗಿದೆ. ನಗರಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ನೇಮಿಸಿಲ್ಲದ ಕಾರಣದಿಂದ ಅಧಿಕಾರಿಗಳ ದರ್ಬಾರ್ ಆಗಿದ್ದು, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.
ಅಲ್ಲದೆ, ಇನ್ನು ಹತ್ತಾರು ಸಮಸ್ಯೆಗಳು ತಾಂಡವಾಡುತ್ತಿದೆ ಎಂದು ಆರೋಪಿಸಿದರು. ಎಲ್ಲ ಸಮಸ್ಯೆಗಳಿಗೆ ಪರಿಹಾರ ಹಾಗೂ ಜಿಲ್ಲಾ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಅನ್ಯಾಯ: ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಕೆ.ವೀರಭದ್ರ ಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿರುವ 5 ಹಾಸ್ಟೆಲ್‌ಗಳನ್ನು ಬಾಗಲಕೋಟೆ ಜಿಲ್ಲೆಗೆ ಎತ್ತಂಗಡಿ ಮಾಡಲಾಗುತ್ತಿದೆ. ಇದರಿಂದ ಜಿಲ್ಲೆಯ ಎಸ್‌ಸಿ, ಎಸ್‌ಟಿ, ಓಬಿಸಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಹಾಸ್ಟೆಲ್‌ಗಳನ್ನು ಬೇರೆ ಜಿಲ್ಲೆಗೆ ಎತ್ತಂಗಡಿ ಮಾಡಬಾರದು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ರೈತ ಹಿತಾರಕ್ಷಣಾ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖರ್, ಜಯಕರ್ನಾಕ ರಕ್ಷಣಾ ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಮಧುವನಹಳ್ಳಿ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಮರಪ್ಪ ಹಾಜರಿದ್ದರು.