ನವದೆಹಲಿ: ಅರ್ಥಶಾಸ್ತ್ರ ವಿಭಾಗದಲ್ಲಿ ಈ ಬಾರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಮಂಗಳವಾರ ಪ್ರಧಾನ ಮಂತ್ರಿ ಅವರ ನಿವಾಸದಲ್ಲಿ ಈ ಭೇಟಿ ನಡೆದಿದ್ದು ಪ್ರಸಕ್ತ ದೇಶದ ಅಭಿವೃದ್ಧಿ ಬೆಳವಣಿಗೆಗೆ ಸಂಬಂಧಿಸಿದಂತೆ ಇವರಿಬ್ಬರೂ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
‘ಅಭಿಜಿತ್ ಬ್ಯಾನರ್ಜಿ ಜೊತೆಗಿನ ಮಾತುಕತೆ ಫಲಪ್ರದವಾಗಿ ನಡೆದಿದ್ದು, ಮಾನವ ಸಂಪನ್ಮೂಲ ಸಬಲೀಕರಣದ ಬಗ್ಗೆಗಿನ ಅವರ ಚಿಂತನೆಗಳು ವಿಶಿಷ್ಟವಾಗಿವೆ. ಆರ್ಥಿಕತೆ ಕ್ಷೇತ್ರದಲ್ಲಿ ಅವರಿಗಿರುವ ಆಸಕ್ತಿ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಬ್ಯಾನರ್ಜಿ ಅವರೊಂದಿಗೆ ವಿವಿಧ ವಿಷಯಗಳ ಬಗ್ಗೆ ಆರೋಗ್ಯಕರ ಸಂವಾದವನ್ನು ನಡೆಸಿದ್ದೇನೆ. ಅವರ ಸಾಧನೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಅವರ ಮುಂದಿನ ಭವಿಷ್ಯಕ್ಕೆ ನನ್ನ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಅಮೆರಿಕಾದ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಜಾಗತಿಕ ಬಡತನ ಸಮಸ್ಯೆಯನ್ನು ನಿವಾರಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.