ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಳಿನ್ ಕುಮಾರ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಇರುವ ಬಿಜೆಪಿ ಚುನಾವಣಾ ಪ್ರಚಾರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆದ ಬಳಿಕ ನಳಿನ್ ಅವರು ಪಕ್ಷದ ಪ್ರಮುಖರ ಜತೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ 10.45ಕ್ಕೆ ನಾಮಪತ್ರ ಸಲ್ಲಿಸುವರು.
ಮಿಥುನ್ ರೈ ಸೋಮವಾರ ನಾಮಪತ್ರ ಸಲ್ಲಿಕೆಗೆ ಪೂರ್ವದಲ್ಲಿ ಬೆಳಗ್ಗೆ 10 ಗಂಟೆಗೆ ಪುರಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವರು. ಬಳಿಕ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಜತೆ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.
ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆಗೆ ಮುನ್ನ ಬೆಳಗ್ಗೆ 11.30ಕ್ಕೆ ಹಂಪನಕಟ್ಟೆ ವೃತ್ತದಿಂದ ಜಿಲ್ಲಾಧಿಕಾರಿಯವರೆಗೆ ರ್ಯಾಲಿ ನಡೆಯಲಿದೆ.
ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಕೆಗೆ ಮುನ್ನ ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ ಭವನದಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ವರೆಗೆ ಕಾರ್ಯಕರ್ತರ ರ್ಯಾಲಿ ನಡೆಯಲಿದೆ.