Advertisement

Deepavali: ದೀಪಾವಳಿಗೆ ಹಸುರೇತರ ಪಟಾಕಿ ಪೂರ್ಣ ನಿಷೇಧ

09:13 PM Oct 19, 2024 | Team Udayavani |

ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸುರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಇದರ ಜತೆಗೆ ಹಸುರು ಪಟಾಕಿ ಹೊರತುಪಡಿಸಿ ಎಲ್ಲ ರೀತಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ.

Advertisement

ಈ ಕುರಿತು ಸಚಿವ ಈಶ್ವರ ಖಂಡ್ರೆ ಮಾತನಾಡಿ, ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ, ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಹಸುರು ಪಟಾಕಿ ಬಳಸಿ

ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸುರು ಪಟಾಕಿಯನ್ನು ಮಾತ್ರವೇ ಸಿಡಿಸಿ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

125 ಡೆಸಿಬಲ್‌ಗಿಂತ ಕಡಿಮೆ ಶಬ್ದದ ಪಟಾಕಿಗೆ ಅವಕಾಶ:

Advertisement

ರಾಷ್ಟ್ರೀಯ ಹಸುರು ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್‌ ತನ್ನ ತೀರ್ಪುಗಳಲ್ಲಿ 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8ರಿಂದ 10ರ ವರೆಗೆ ಮಾತ್ರ ಹಸುರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:

ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸುರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂ ಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ.

ಕೆಎಸ್‌ಪಿಸಿಬಿಯಿಂದ ಸೂಚನೆ:

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಹಸುರು ಪಟಾಕಿ ಹೊರತುಪಡಿಸಿ ಎಲ್ಲ ರೀತಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟವನ್ನು (ಆನ್‌ಲೈನ್‌ ಮಾರ್ಕೆಟಿಂಗ್‌ ಪ್ಲಾಟ್‌ಫಾರ್ಮ್ಗಳ ಮೂಲಕ ವಿತರಣೆ ಸೇರಿದಂತೆ) ನಿಷೇಧಿಸಿದೆ.

ಜಾಗೃತಿ ಮೂಡಿಸಲು ಮನವಿ

ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಸಚಿವರು ಮನವಿ ಮಾಡಿದ್ದಾರೆ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next