ಗದಗ: ಕೋವಿಡ್ ನಿಯಂತ್ರಣಕ್ಕಾಗಿ ಸೋಂಕಿನ ಪರೀಕ್ಷೆಯಿಂದ ಚಿಕಿತ್ಸೆವರೆಗೂ ಸಂಪೂರ್ಣ ಖರ್ಚು ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಜೊತೆಗೆ ಕೋವಿಡ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನೂ ಸರಕಾರದ ಮಾರ್ಗಸೂಚಿಗಳನ್ವಯ ನಿರ್ವಹಿಸಲಾಗುತ್ತದೆ. ಈ ಕುರಿತು ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಕೇಳಿ ಬಂದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಖಡಕ್ಕಾಗಿ ಎಚ್ಚರಿಸಿದರು.
ಜಿಪಂ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್, ಇಒ, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆ ರೆನ್ಸ್ ಮೂಲಕ ಸಭೆ ನಡೆಸಿದ ಅವರು, ಕೋವಿಡ್ ಸೋಂಕು ನಿಯಂತ್ರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸಲ್ಲದು. ಕೋವಿಡ್ ಸೋಂಕು ಪತ್ತೆ ಹಾಗೂ ಪ್ರಾಥಮಿಕ, ದ್ವಿತೀಯ ಸಂರ್ಕಿತರ ಪರೀಕ್ಷೆಗೆ ಅಗತ್ಯ ಮಾನವ ಸಂಪನ್ಮೂಲ ಸೇರಿದಂತೆ ಸಾಮಗ್ರಿಗಳನ್ನು ಒದಗಿಸಲಾಗಿದ್ದು, ಕ್ಷಿಪ್ರವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಇಗಿರುವ ಆಕ್ಸಿಜನ್ ಹಾಸಿಗೆಗಳ ಸಾಮರ್ಥ್ಯಕ್ಕಿಂತ ಹೆಚ್ಚುವರಿಯಾಗಿ 100 ಆಕ್ಸಿಜನ್ ಹಾಸಿಗೆಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 50 ಆಕ್ಸಿಜನ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ದೊರಕಿಸಬೇಕು. ಈ ನಿಟ್ಟಿನಲ್ಲಿ ಅ ಧಿಕಾರಿಗಳು ಕಾರ್ಯ ಪ್ರವತ್ತರಾಗಬೇಕೆಂದು ತಿಳಿಸಿದರು.
ಕೋವಿಡ್-19 ಸೋಂಕಿನ ಪರೀಕ್ಷೆಯಿಂದ ಚಿಕಿತ್ಸೆಯವರೆಗೆ ಎಲ್ಲ ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ರೋಗ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ನೇರವಾಗಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಿಗೆ ತೆರಳಿ ಉಚಿತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ದೃಢಪಟ್ಟರೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಉಚಿತ ವಸತಿ, ಊಟೋಪಚಾರ ಸೇರಿದಂತೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸಾರ್ವಜನಿಕರು ಪರೀಕ್ಷೆಗೆ ಒಳಪಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಆರೋಗ್ಯ ಸಮೀಕ್ಷೆಯಲ್ಲಿ ಅಸ್ತಮಾ, ಮಧುಮೇಹ, ರಕ್ತದೊತ್ತಡ, ಉಸಿರಾಟ ತೊಂದರೆಯಂತಹ ಇತರೆ ರೋಗ ಲಕ್ಷಣಗಳಿರುವ ಎಪ್ಪತ್ತೂಂದು ಸಾವಿರ ವ್ಯಕ್ತಿಗಳನ್ನು ಗುರುತಿಸಲಾಗಿದ್ದು, ಮುಂದಿನ ಒಂದು ವಾರದೊಳಗೆ ಅವರೆಲ್ಲರ ಆರೋಗ್ಯ ತಪಾಸಣೆ ನಡೆಸಬೇಕಿದೆ ಎಂದು ತಿಳಿಸಿದರು. ಈಗಾಗಲೇ ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ (ಎಂಎಸ್‌ಪಿ)ಗಳನ್ನು ಗುರುತಿಸಿ, ಅದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ| ಆನಂದ ಕೆ., ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಸತೀಶ ಬಸರಿಗಿಡದ ಉಪಸ್ಥಿತರಿದ್ದರು.