ಮೈಸೂರು: ನಾನು ಸಚಿವ ಸ್ಥಾನಕ್ಕೆ ಯಾವುದೇ ಲಾಭಿ ಮಾಡಿಲ್ಲ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ, ವರುಣಾ ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಶಾಸಕ ಡಾ.ಯತೀಂದ್ರ ಹೇಳಿದರು.
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ.
ಅಲ್ಲದೆ ವರುಣಾ ಕ್ಷೇತ್ರದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಸದನದಲ್ಲಿ ಬಹುಮತ ಸಾಬೀತುಪಡಿಸುವ ಅನಿವಾರ್ಯತೆ ಇದ್ದ ಕಾರಣ ಕ್ಷೇತ್ರಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.
ಎರಡು ವರ್ಷಗಳಿಂದ ಕ್ಷೇತ್ರದ ಜನರ ಒಡನಾಟದಲ್ಲಿದ್ದೇನೆ. ಅವರ ಕಷ್ಟ-ಸುಖಗಳನ್ನು ಆಲಿಸಿದ್ದೇನೆ. ಹೀಗಾಗಿ ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರಕ್ಕೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡುತ್ತೇನೆ. ವರುಣಾ ಕ್ಷೇತ್ರವನ್ನು ಸಾಕ್ಷರತಾ ಕ್ಷೇತ್ರವನ್ನಾಗಿ ಮಾಡುವ ಕನಸು ಕಂಡಿದ್ದೇನೆ. ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಬಗ್ಗೆಯೂ ಹೆಚ್ಚಿನ ನಿಗಾ ವಹಿಸುತ್ತೇನೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ದಿನಗಳಷ್ಟೇ ಆಗಿದ್ದು, ಕೂಡಲೇ ಎಲ್ಲಾ ಭರವಸೆಗಳನ್ನು ಈಡೇರಿಸಲು ಆಗುವುದಿಲ್ಲ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಅಧಿಕಾರಿಗಳ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಹಂತಹಂತವಾಗಿ ಚುನಾವಣಾ ಪ್ರಚಾರದ ವೇಳೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ದೇವಸ್ಥಾನಗಳಿಗೆ ಭೇಟಿ: ಶಾಸಕರಾಗಿ ಆಯ್ಕೆಯಾದ ಬಳಿಕ ಕ್ಷೇತ್ರದಲ್ಲಿ ಕಾಣಿಸಿಕೊಂಡ ಶಾಸಕ ಡಾ.ಯತೀಂದ್ರ, ಹಲವು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಮೊದಲಿಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದ ಯತೀಂದ್ರ, ನಾಡದೇವತೆಗೆ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಸುತ್ತೂರು ಶಾಖಾ ಮಠಕ್ಕೆ ತೆರಳಿದ ಅವರು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು, ಕೆಲಕಾಲ ಮಾತುಕತೆ ನಡೆಸಿದರು. ಇದಲ್ಲದೆ ಉತ್ತನಹಳ್ಳಿಯ ಶ್ರೀ ತ್ರಿಪುರ ಸುಂದರಿ ಜ್ವಾಲಾಮುಖೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು, ಸಿಹಿ ವಿತರಿಸಿದರು. ಈ ಸಂದರ್ಭದಲ್ಲಿ ಎಚ್.ಡಿ.ಕೋಟೆ ನೂತನ ಶಾಸಕ ಅನಿಲ್ ಚಿಕ್ಕಮಾದು, ಮದ್ದೂರು ಕ್ಷೇತ್ರದ ಶಾಸಕ ಡಿ.ಸಿ.ತಮ್ಮಣ್ಣ ಸೇರಿದಂತೆ ಇನ್ನಿತರ ಸ್ಥಳೀಯ ಮುಖಂಡರು ಸಾಥ್ ನೀಡಿದರು.