ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿಯಲ್ಲಿ ಮರಳು ಸಮಸ್ಯೆ ಪರಿಹಾರಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಮರಳು ಅಭಾವದ ಸಮಸ್ಯೆ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ್ ಅಧ್ಯಕ್ಷತೆಯಲ್ಲಿ ಉಭಯ ಜಿಲ್ಲೆಗಳ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಯಿತು.
ಎರಡೂ ಜಿಲ್ಲೆಗಳಲ್ಲಿ ಮರಳು ಸಮಸ್ಯೆ ಉದ್ಭವಿಸದಂತೆ ಪರಿಹಾರದ ನಿಟ್ಟಿನಲ್ಲಿ ಪ್ರಸ್ತುತ ಸಿಆರ್‌ಝಡ್ ವಲಯದಲ್ಲಿ ನೀಡಿರುವ ಪರವಾನಿಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲು ಅವಕಾಶಗಳ ಬಗ್ಗೆ ಪರಿಶೀಲನೆ, ನಾನ್ ಸಿಆರ್‌ಝಡ್ ವಲಯದ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಕ್ರಮ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವರದಿಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿಗೆ ನೀಡುವಂತೆ ಸಚಿವರು ಸೂಚಿಸಿದರು. ಇದಲ್ಲದೆ ಉಡುಪಿ ಜಿಲ್ಲೆಯಲ್ಲಿ ಕ್ರಷರ್ ಪರವಾನಿಗೆ ಕುರಿತು ಇರುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆದಿದೆ.
ಉಭಯ ಜಿಲ್ಲೆಗಳ ಮರಳಿನ ಸಮಸ್ಯೆಗೆ ಸರಕಾರ ಸ್ಪಂದಿಸುತ್ತಿಲ್ಲ. ಕಾನೂನಿನ ನೆಪವೊಡ್ಡಿ ಸಮಸ್ಯೆಗೆ ಪರಿಹಾರ ನೀಡುತ್ತಿಲ್ಲ ಎಂದು ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಇದೇ ವಿಚಾರವಾಗಿ ಶುಕ್ರವಾರ ಮುಖ್ಯಮಂತ್ರಿಗಳೊಂದಿಗೂ ಶಾಸಕರು ಚರ್ಚೆ ನಡೆಸಲಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ಅಂಗಾರ, ವೇದವ್ಯಾಸ ಕಾಮತ್, ರಾಜೇಶ್ ನಾೖಕ್, ಡಾ| ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ಸುನಿಲ್ ಕುಮಾರ್, ರಘುಪತಿ ಭಟ್, ಲಾಲಾಜಿ ಮೆಂಡನ್ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.