Advertisement

700 ಎಕರೆ ಭೂಸ್ವಾಧೀನ ಶಿಫಾರಸಿಗೆ ಸೂಚನೆ

08:06 AM Jun 20, 2020 | Suhan S |

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಹೊಸದಾಗಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಸಲುವಾಗಿ ನಿಲುವಂಜಿ, ಹೇರುಂಡಿ, ಕರೆಗೂಡ, ನಗರಗುಂಡ ಮತ್ತು ಕರಡಿಗುಡ್ಡ ಗ್ರಾಮಗಳಲ್ಲಿ ಒಟ್ಟು 700 ಎಕರೆ ಪ್ರದೇಶ ಭೂಸ್ವಾಧೀನ ಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ಶಿಫಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಕೆಐಎಡಿಬಿ ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಪ್ರಕಾಶ ಅವರಿಗೆ ಸೂಚನೆ ನೀಡಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ನಡೆದ ವಿಶೇಷ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇವದುರ್ಗ ಅತಿ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ತಾಲೂಕಾಗಿದೆ. ಇಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಲ್ಲಿ ಕೆಲಸಕಾಗಿ ಗುಳೆಹೋಗುವವರ ಸಂಖ್ಯೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಸ್ವಾಧೀನಪಡಿಸಿಕೊಳ್ಳಬೇಕಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಕೆಐಎಡಿಬಿ ವತಿಯಿಂದ 700 ಎಕರೆ ಪ್ರದೇಶವನ್ನು ಭೂಸ್ವಾಧೀನಪಡಿಸಿಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಅದರಂತೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ದೇವದುರ್ಗ ತಾಲೂಕಿನಲ್ಲಿ ವಿವಿಧ ರೀತಿಯ ಕೈಗಾರಿಕೆ ಸ್ಥಾಪನೆಗೆ ಉತ್ತಮ ಅವಕಾಶಗಳಿವೆ. ಕಾರ್ಮಿಕರು, ಕೃಷ್ಣ ನದಿಯಿಂದ ನೀರು ಸರಬರಾಜು ಮಾಡಲು ವ್ಯವಸ್ಥೆ ಇದೆ. ಅದರಿಂದ ಜಿಲ್ಲೆಯ ಅಭಿವೃದ್ದಿಗೆ ಹಲವು ಆಯಾಮಗಳು ದೊರೆಯಲಿವೆ ಎಂದು ಹೇಳಿದರು.

ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಷಿ, ಕಲಬುರಗಿ ವಿಶೇಷ ಭೂಸ್ವಾಧೀನಾಧಿಕಾರಿ ಶರಣಪ್ಪ ಸತ್ಯಂಪೇಟೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಹಮ್ಮದ್‌ ಇರ್ಫಾನ್‌ ಹಾಗೂ ಫ್ಯಾಕ್ಟರಿ ಮಾಲೀಕರ ಸಂಘದ ಅಧ್ಯಕ್ಷ ಲಕ್ಷ್ಮೀರೆಡ್ಡಿ, ರೈಸ್‌ ಮಿಲ್ಸ್‌ ಸಂಘದ ಅಧ್ಯಕ್ಷ ಶ್ರೀಕಾರ ರಾಘವೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಬಸವರಾಜ ಯಂಕುಚ್ಚಿ ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next