ಬೆಂಗಳೂರು: ಮಡಿವಾಳ ಮಾರುಕಟ್ಟೆ ಅಭಿವೃದ್ಧಿ ಯೋಜನೆಯಡಿ ನಿರ್ಮಿಸುತ್ತಿರುವ 440 ಸುಸಜ್ಜಿತ ಅಂಗಡಿಗಳ ಪೈಕಿ 100 ಅಂಗಡಿಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ವ್ಯಾಪಾರಿಗಳಿಗೆ ಹಸ್ತಾಂತರಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವರು ಸೋಮವಾರ ಮೇಯರ್ ಜಿ.ಪದ್ಮಾವತಿ ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕಾಮಗಾರಿ ವಿಳಂಬವಾಗುತ್ತಿರುವ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಕಾಮಗಾರಿ ಚುರುಕುಗೊಳಿಸಿ ಸೆಪ್ಟೆಂಬರ್ ವೇಳೆ ಕನಿಷ್ಠ 100 ಮಳಿಗೆಗಳನ್ನು ವ್ಯಾಪಾರಿಗಳಿಗೆ ವಿತರಿಸಬೇಕು. ಈ ನಿಟ್ಟಿನಲ್ಲಿ ಮಳಿಗೆಗಳ ನಿರ್ಮಾಣ ಕಾಮಗಾರಿಯ ವೇಗ ಹೆಚ್ಚಿಸಬೇಕು ಎಂದು ಸೂಚಿಸಿದರು.
“ಮಂಜುನಾಥ ರೆಡ್ಡಿ ಮೇಯರ್ ಆಗಿದ್ದಾಗ 14 ಕೋಟಿ ರೂ. ವೆಚ್ಚದಲ್ಲಿ 440 ಅಂಗಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ, ಕಾಮಗಾರಿ ಪ್ರಗತಿ ಕುಂಠಿತವಾಗಿರುವುದರಿಂದ ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲ. ಅಲ್ಲದೆ, ವೆಚ್ಚ 14 ಕೋಟಿಯಿಂದ 21 ಕೋಟಿ ರೂ.ಗೆ ಏರಿದೆ. ಅನುದಾನ ಹೊಂದಾಣಿಕೆ ಮಾಡಿಕೊಂಡು ಕಾಮಗಾರಿ ನಡೆಸಬೇಕಿದೆ,’ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
“ಈಗಾಗಲೇ 68 ಅಂಗಡಿಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, 28 ಅಂಗಡಿಗಳಿಗೆ ಅಡಿಪಾಯ ಹಾಕಲಾಗಿದೆ. ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಹೊಸೂರು ರಸ್ತೆಯಿಂದ ಸರ್ಜಾಪುರ ರಸ್ತೆವರೆಗೆ 440 ಮಳಿಗೆಗಳನ್ನು ನಿರ್ಮಿಸಲಾಗುವುದು. ಜತೆಗೆ ವ್ಯಾಪಾರಿಗಳು ಹಾಗೂ ರೈತರ ಅನುಕೂಲಕ್ಕಾಗಿ ಶೌಚಾಲಯ, ಸ್ನಾನದ ಗೃಹ ಹಾಗೂ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗುವುದು,’ ಎಂದು ಹೇಳಿದರು.
ಮೇಯರ್ ಜಿ.ಪದ್ಮಾವತಿ ಮಾತನಾಡಿ, ಮಾರುಕಟ್ಟೆಯಲ್ಲಿ ಅಂಗಡಿಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿರುವ ಪರಿಷ್ಕೃತ ಮೊತ್ತವನ್ನು 2017-18ನೇ ಬಜೆಟ್‌ನಲ್ಲಿ ಹೊಂದಾಣಿಕೆ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಮಾರುಕಟ್ಟೆಯಲ್ಲಿ ಕಾರು, ದ್ವಿಚಕ್ರ ವಾಹನಗಳ ನಿಲುಗಡೆ, ಕುಡಿಯುವ ನೀರಿನ ವ್ಯವಸ್ಥೆಯಂತಹ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಪಾಲಿಕೆಯ ಆಡಳಿತ ಪಕ್ಷದ ನಾಯಕ ಮಹಮದ್ ರಿಜ್ವಾನ್, ಆಯುಕ್ತ ಎನ್.ಮಂಜುನಾಥ ಪ್ರಸಾದ್, ಮಾಜಿ ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಸೇರಿ ಪ್ರಮುಖರು ಹಾಜರಿದ್ದರು.