ಕಲಬುರಗಿ: ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ತ್ಯಾಜ್ಯ ವಸ್ತುಗಳ ಉತ್ಪತ್ತಿ ಸಹ ಸಹಜವಾಗಿಯೇ ಹೆಚ್ಚಾಗುತ್ತಿದೆ. ನಗರದ ನೈರ್ಮಲ್ಯಕ್ಕೆ ಪಾಲಿಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕಾಗಿದೆ. ನಗರದ ಎಲ್ಲ ಒಳಚರಂಡಿಗಳನ್ನು ಕೂಡಲೇ ಸ್ವತ್ಛಗೊಳಿಸುವ ಹಾಗೂ ಪ್ಲಾಸ್ಟಿಕ್ ಬಳಕೆ ತಡೆಗಟ್ಟುವ ಮೂಲಕ ತ್ಯಾಜ್ಯಮುಕ್ತ ಕಲಬುರಗಿ ನಗರವನ್ನಾಗಿಸಲು ಪಣತೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ನಗರದಲ್ಲಿ ಬಹುತೇಕ ಒಳಚರಂಡಿಗಳು ತುಂಬಿಕೊಂಡಿವೆ. ಇದರಿಂದ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತಿದೆ. ಪಾಲಿಕೆ ಅಧಿಕಾರಿಗಳು ಕೂಡಲೇ ಇದರ ಸ್ವತ್ಛತೆ ಕಡೆಗೆ ಗಮನಹರಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಅಲ್ಲಲ್ಲಿ ಬೇಕರಿ, ಪಾನ್‌ಶಾಪ್, ಹೋಟೆಲ್, ವಾಣಿಜ್ಯ ಮಳಿಗೆಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ, ಸಂಗ್ರಹಣೆ ಮತ್ತು ಮಾರಾಟಕ್ಕೆ ಬ್ರೇಕ್ ಬಿದ್ದಿಲ್ಲ. ಪ್ಲಾಸ್ಟಿಕ್ ನಿಯಂತ್ರಣಕ್ಕಾಗಿ ಪಾಲಿಕೆ ಅಧಿಕಾರಿಗಳು ಕೂಡಲೇ ಅಂಗಡಿಗಳ ಮೇಲೆ ದಾಳಿ
ನಡೆಸಿ ನಿಯಂತ್ರಣ ತರುವ ಮೂಲಕ ಪಾಸ್ಟಿಕ್ ಮುಕ್ತ ಕಲಬುರಗಿ ನಗರ ಮಾಡಬೇಕು. ಪ್ರತಿ ಬಡಾವಣೆಯಿಂದ ಕಸ ಸಂಗ್ರಹಿಸಿ ವೈಜ್ಞಾನಿಕ ವಿಲೇವಾರಿಗೆ ಕ್ರಮವಹಿಸಬೇಕು. ಒಟ್ಟಾರೆ ನಗರದ ನೈರ್ಮಲ್ಯಕ್ಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದಿನ 20 ವರ್ಷಗಳ ಜನಸಂದಣಿ ಮುಂದಾಲೋಚನೆ ಇಟ್ಟುಕೊಂಡು ರಸ್ತೆಗಳನ್ನು ಹಾಗೂ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕು. ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಸಿಗಳನ್ನು ನೆಡುವುದರ ಮೂಲಕ ವನ ಸ್ಥಾಪನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು.
ಮುಂಗಾರಿನಲ್ಲಿ ವಾಡಿಕೆಯಂತೆ ಮಳೆ ಬಾರದಿರುವುದಿರಂದ ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆ ಆರಂಭದಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಹೆಚ್ಚಿದ್ದು, ಗ್ರಾಮಗಳಲ್ಲಿನ ಕೊಳವೆ ಬಾವಿಗಳ ಫ್ಲಶಿಂಗ್ ಕಾರ್ಯಕೈಗೊಳ್ಳಬೇಕು. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆಯೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರುನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಇದ್ದರು.