ಬೆಂಗಳೂರು: ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ವತಿಯಿಂದ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿರುವ ಸ್ಥಳಗಳಲ್ಲಿ ಸರ್ಕಾರಿ ಜಮೀನು ಹಸ್ತಾಂತರ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದ್ದಾರೆ.
ಉದ್ಯೋಗ ಮಿತ್ರ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಸಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ದಿಗೆ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳ ಪೈಕಿ ಹಲವು ಜಮೀನುಗಳು ಮಂಡಳಿಗೆ ಭೌತಿಕವಾಗಿ ಹಸ್ತಾಂತರವಾಗಿಲ್ಲ. ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಹಂತದಲ್ಲಿ ಜಮೀನು ಹಸ್ತಾಂತರ ವಿಚಾರ ಬಾಕಿ ಇದೆ. ಇದರಿಂದಾಗಿ ಕೈಗಾರಿಕಾ ಪ್ರದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಕಂಪನಿಗಳಿಗೆ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ಜಮೀನೀನ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಮೀಕ್ಷಾ ವರದಿ ನೀಡಬೇಕು. ಕೆಲವು ಖಾಸಗಿ ವ್ಯಕ್ತಿಗಳಿಂದಾಗುವ ಸಮಸ್ಯೆ ಗಳನ್ನು ಪರಿಹರಿಸಲು ಇದು ಪ್ರಮುಖ ಹಂತ. ಈ ನಿಟ್ಟಿನಲ್ಲಿ ಪತ್ರ ಬರೆಯಲಾಗುವುದು. ಕೆಐಎಡಿಬಿ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಿಕೊಳ್ಳಿ ಎಂದು ಸೂಚಿಸಿದರು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ. ಎನ್ ಶಿವಶಂಕರ್ ಉಪಸ್ಥಿತರಿದ್ದರು.