ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ವೇಳೆ ಖಾಸಗಿ ಅಪಾರ್ಟ್ ಮೆಂಟ್‌ನಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ರಾಜ ರಾಜೇಶ್ವರಿ ನಗರದ ಅನರ್ಹ ಶಾಸಕ ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋ ರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ನಗರದ ಎನ್. ಆನಂದ ಕುಮಾರ್ ಹಾಗೂ ಜಿ .ಸಂತೋಷ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಸಿಬಿಐ, ಮುನಿರತ್ನ ಸೇರಿದಂತೆ ಇತರ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಮತ್ತು ಜಾಲಹಳ್ಳಿ ಠಾಣೆ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜೂನ್ ತಿಂಗಳಿಗೆ ಮುಂದೂಡಿತು.
2018ರ ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಅಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಹಾಗೂ ಅವರ ಬೆಂಬಲಿಗರ ವಿರುದ್ಧದ ಪ್ರಕರಣದಲ್ಲಿ ಪೊಲೀಸರು ನಿಷ್ಪಕ್ಷವಾಗಿ ತನಿಖೆ ನಡೆಸಿಲ್ಲ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.