ಬೆಂಗಳೂರು: ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ನೌಕರರ ಮುಷ್ಕರವನ್ನು ಹಿಂಪಡೆಯಲಾಗಿದೆ.
ಅಲ್ಲದೆ ಕೂಡಲೇ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸೂಚಿಸಿದ್ದಾರೆ.
ನೌಕರರ ಸಂಘದ ಜೊತೆತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸೂಚಿಸಿದರು. ಈ ಬಗ್ಗೆ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರ ಕೈಬಿಡಲು ನಿರ್ಧಾರ ಮಾಡಿದೆ.
ಇದನ್ನೂ ಓದಿ:ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ಇಲಾಖೆ ವಿರುದ್ಧ ಪಿತೂರಿ; ಪೊಲೀಸ್ ಸಿಬ್ಬಂದಿ ಅಮಾನತು
ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.