ಬೆಂಗಳೂರು: ರಾಜ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಮಾರ್ಗಸೂಚಿ ಕಲ್ಲುಗಳು, ನಾಮಫಲಕಗಳ ಮೇಲೆ ಹಿಂದಿ ಭಾಷೆ ಬರೆದಿರುವುದಕ್ಕೆ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಮ್ಮ ಮೆಟ್ರೋ ತನ್ನ ನಾಮಫಲಕಗಳಲ್ಲಿ ಹಿಂದಿ ಭಾಷೆ ಬಳಕೆ ಮಾಡಿರುವುದನ್ನು ಆಕ್ಷೇಪಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಮಧ್ಯೆ ಹಿಂದಿ ಭಾಷೆ ಹೇರಿಕೆ ವಿರುದ್ಧ ಧ್ವನಿ ಎತ್ತಿದರೆ ನಾನು ತಮ್ಮ ಜೊತೆಗೆ ನಿಲ್ಲುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪಸಿಂಹ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟ್ವಿಟ್ ಮಾಡಿದ್ದಾರೆ.
“ನಮ್ಮ ಮೆಟ್ರೋ’ ನಾಮಫಲಕಗಳಲ್ಲಿ ಅನಾವಶ್ಯಕವಾಗಿ ಹಿಂದಿ ಭಾಷೆ ಬಳಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವುದನ್ನು ಉಲ್ಲೇಖೀಸಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಏಳು ದಿನಗಳಲ್ಲಿ ನೋಟಿಸ್‌ಗೆ ಉತ್ತರಿಸುವಂತೆ ನಿರ್ದೇಶನ ನೀಡಿದ್ದಾರೆ.
ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಸಲು ಅವಕಾಶವಿದೆ. ಆದರೆ, ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿರುವ ನಮ್ಮ ಮೆಟ್ರೋ ರೈಲುಗಳ ನಾಮಫಲಕಗಳಲ್ಲಿ ಅನವಶ್ಯವಾಗಿ ಹಿಂದೆ ಭಾಷೆಯನ್ನು ಬಳಸಿದೆ. ಈ ಬಗ್ಗೆ ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.