ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ, ಪ್ರತ್ಯೇಕಿಸಿ ಅವರನ್ನು ಗಡಿಪಾರು ಮಾಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತಂತೆ ವಕೀಲ ಡಾ. ಕೆ.ಬಿ. ವಿಜಯಕುಮಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಸಂಬಂಧಿಸಿದಂತೆ ಅ.25ರೊಳಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿತು.
ಭಾರತದಲ್ಲಿ 2 ಕೋಟಿ ಬಾಂಗ್ಲಾದೇಶಿಗರು ಅಕ್ರಮವಾಗಿ ನುಸುಳಿದ್ದಾರೆ ಎಂದು ಇತ್ತಿಚಿಗೆ ರಾಜ್ಯಸಭೆಯಲ್ಲಿ ಹೇಳಿಕೆ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ 40 ಸಾವಿರ ಬಾಂಗ್ಲಾದೇಶಿಗರು ವಾಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯವರು ಆಗಾಗ ಹೇಳಿಕೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಬೆಂಗಳೂರು ಉತ್ತರ ಮತ್ತು ಪೂರ್ವದಲ್ಲಿ ಇರುವುದಾಗಿ ಅರ್ಜಿದಾರರು ಹೇಳಿದ್ದಾರೆ.
ಅಕ್ರಮ ಬಾಂಗ್ಲಾ ವಲಸಿಗರು ಸಮಾಜಕ್ಕೆ ಅಪಾಯ. ಇವರು ಭಯೋತ್ಪಾದನೆ ಸೇರಿದಂತೆ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುತ್ತಾರೆ. ಈ ಬಗ್ಗೆ ಅನೇಕ ಬಾರಿ ಗಮನಕ್ಕೆ ತಂದರೂ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಆದ್ದರಿಂದ ರಾಜ್ಯ ಸೇರಿದಂತೆ ಮುಖ್ಯವಾಗಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ, ಪ್ರತ್ಯೇಕಿಸಿ ಅವರು ಗಡಿಪಾರು ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
ಅಕ್ರಮ ವಲಸಿಗರ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ವಿರುದ್ಧ ಕಡತಗಳು, ಸುತ್ತೋಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.