Advertisement

ರಾಜ್ಯ ಸರ್ಕಾರಕ್ಕೆ ನೋಟಿಸ್‌

06:07 AM Jan 25, 2019 | |

ಬೆಂಗಳೂರು: ಮಂಚನಬೆಲೆ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವ್ಯಾಪಕ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದರಿಂದ ಸಾರ್ವಜನಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ತಾವರೆಕೆರೆ ಹೋಬಳಿ ನಾಗರಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರೇವಣಸಿದ್ದಯ್ಯ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಹಾಗೂ ನ್ಯಾ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ,  ಸರ್ಕಾರ‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಮಂಚನಬೆಲೆ ಡ್ಯಾಂ ಸುತ್ತಮುತ್ತಲ ಗ್ರಾಮಗಳಾದ ಸುಲಿವಾರ‌, ಹುಲುವೇಹಳ್ಳಿ, ಮಾದಾಪಟ್ನ, ಚಿಕ್ಕನಹಳ್ಳಿ, ಅಜ್ಜನಹಳ್ಳಿ, ಚುಂಚನಕುಪ್ಪೆ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬಂಡೆಗಳನ್ನು ಸಿಡಿಸಲು ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಇದು ಜನ-ಜಾನುವಾರುಗಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮನವಿ ಕೊಟ್ಟರೂ ಪ್ರಯೋಜವಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಈ ಭಾಗದಲ್ಲಿ ಕಲ್ಲುಗಳನ್ನು ಪುಡಿ ಮಾಡಲು ಭಾರಿ ಪ್ರಮಾಣದ ಕ್ರಷರ್‌ಗಳನ್ನು ಹಗಲೂ ರಾತ್ರಿ ಬಳಕೆ ಮಾಡಲಾಗುತ್ತಿದೆ. ಇದರಿಂದ ವ್ಯಾಪಕ ಧೂಳು ಉಂಟಾಗಿ ಅದು ನೀರು ಮತ್ತು ಆಹಾರದಲ್ಲಿ ಬೆರೆಯುತ್ತಿದೆ. ಇದರಿಂದ ಜನ-ಜಾನುವಾರುಗಳು ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next