ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆಧ್ಯಾದೇಶ ಅನುಷ್ಠಾನಕ್ಕೆ ತರುವ ಪ್ರಕ್ರಿಯೆ ಚಾಲನೆಯಲ್ಲಿರುವ ಹಿನ್ನೆಲೆಯಲ್ಲಿ ಮೀಸಲಾತಿ ಅನ್ವಯವಾಗುವ ನೇಮಕಾತಿ ಹಾಗೂ ಮುಂಬಡ್ತಿ ನೀಡುವ ಪ್ರಕ್ರಿಯೆಗಳನ್ನು ತಡೆ ಹಿಡಿಯುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸರ್ಕಾರ ಸೂಚನೆ ನೀಡಿದೆ.
ಆಧ್ಯಾದೇಶದಂತೆ ರಾಜ್ಯದ ಅಧೀನ ಸೇವೆಗಳಲ್ಲಿನ ನೇರ ನೇಮಕಾತಿ ಅಥವಾ ಪದನ್ನೋತಿಗಳಲ್ಲಿ ಎಸ್ಸಿ-ಎಸ್ಟಿ ವರ್ಗಗಳ ವ್ಯಕ್ತಿಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ನಿಗದಿಪಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.
ಆ ಪ್ರಕ್ರಿಯೆ ಪೂರ್ಣಗೊಂಡು ಅಧಿಕೃತವಾಗಿ ಪ್ರಕಟವಾಗುವವರೆಗೆ ಎಲ್ಲಾ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲು ಮತ್ತು ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸಬಾರದು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಇತ್ತೀಚೆಗೆ ಟಿಪ್ಪಣಿ ಹೊರಡಿಸಿದ್ದಾರೆ.