ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಜೆಡಿಎಸ್‌ನ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ರಾಜ್ಯ ಪದಾಧಿಕಾರಿಗಳ ಸಭೆ ಹುಬ್ಬಳ್ಳಿಯಲ್ಲಿ ನ. 16ರಂದು ನಡೆಯಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ಅತಿ ಹೆಚ್ಚು ಸೀಟು ಗೆಲ್ಲುವ ಗುರಿ ಹೊಂದಿರುವ ಜೆಡಿಎಸ್ ಅದಕ್ಕಾಗಿಯೇ ಹುಬ್ಬಳ್ಳಿಯಲ್ಲಿ ಕಾರ್ಯಕಾರಿ ಹಾಗೂ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಲು ಮುಂದಾಗಿದೆ.
ನ. 16ರಂದು ನಡೆಯಲಿರುವ ಸಭೆಯಲ್ಲೇ ಚುನಾವಣ ಪ್ರಣಾಳಿಕೆಯೂ ಸಿದ್ಧಗೊಳ್ಳಲಿದೆ. ಶನಿವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕಾರಿ ಸಮಿತಿ ಮಹತ್ವದ್ದಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ರೂಪುರೇಷೆ, ಕಾರ್ಯರಂತ್ರ ಚರ್ಚೆಗೆ ಬರಲಿದೆ ಎಂದು ಹೇಳಿದರು.
ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲು ನಿರ್ಧರಿಸ ಲಾಯಿತು. ರಾಜ್ಯ ಘಟಕದ ಪದಾಧಿಕಾರಿಗಳಿಗೆ ಪ್ರತ್ಯೇಕ ಹೊಣೆಗಾರಿಕೆನೀಡಲು ತೀರ್ಮಾನಿಸಲಾಯಿತು. ಸಕ್ರಿಯ ರಾಜಕಾರಣದಲ್ಲಿ ತೊಡಗಿ ರುವ ಪಿ.ಜಿ.ಆರ್. ಸಿಂಧ್ಯಾ ಅವರಿಗೆ ಮಹತ್ವದ ಜವಾಬ್ದಾರಿ ನೀಡಲು ನಿರ್ಧರಿಸಲಾಯಿತು ಎಂದರು.