ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗಿದೆ. ಇಂದು ದಾಖಲೆಯ 73 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ260ಕ್ಕೆ ಏರಿಕೆಯಾಗಿದೆ.
ಮೂವರು ದುಬೈನಿಂದ ಆಗಮಿಸಿದ ಪ್ರಯಾಣಿಕರಾಗಿದ್ದು, 61 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಸೋಂಕಿನ ಪ್ರಕರಣಗಳು ಈ ಮಟ್ಟಿಗೆ ಏರಿಕೆ ಕಂಡಿದ್ದು, ಸಹಜವಾಗಿಯೇ ಜನತೆಯ ಆತಂಕಕ್ಕೆ ಕಾರಣವಾಗಿದೆ. 73 ಪ್ರಕರಣಗಳು ಪೈಕಿ 68 ಜನರನ್ನು ಈಗಗಲೇ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಐವರ ಸಂಪರ್ಕ ಪತ್ತೆ ಕಾರ್ಯ ಮಾಡಲಾಗುತ್ತಿದೆ.
ಶಂಕರನಾರಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಓರ್ವರಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಅವರು ವಾಸಿಸುತ್ತಿದ್ದ ಕೋಟತಟ್ಟು ಗ್ರಾಮ ಪಂಚಾಯತ್ ಕಚೇರಿ ಸಮೀಪದ ಮನೆಯ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಹಾಗೂ ಸ್ಥಳೀಯರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ಶಂಕರನಾರಯಣ ಮಹಿಳಾ ಪೊಲೀಸ್ ಸೇರಿದಂತೆ ಜಿಲ್ಲೆಯಲ್ಲಿ ಇಂದು ಒಟ್ಟು ನಾಲ್ವರು ಪೊಲೀಸರಿಗೆ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಈ ಮೊದಲು ಸೋಂಕು ದೃಢವಾಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯಗಳಿಂದ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಹಾರಾಷ್ಟ್ರ ಮೂಲದ ಪ್ರಯಾಣಿಕರಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡು ಬರುತ್ತಿದೆ.
ರಾಜ್ಯದಲ್ಲಿ ಇಂದು ಹೊಸ 187 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 52 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.